ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಮ್ಮೆ ಬಹಿರಂಗ ಸವಾಲು ಹಾಕಿದ್ದು, ತಮ್ಮೊಂದಿಗೆ ನೇರ ಮುಖಾಮುಖಿ ಚರ್ಚೆ ನಡೆಸುವಂತೆ ಆಗ್ರಹಿಸಿದ್ದಾರೆ. ಇಬ್ಬರ ನಡುವೆ ಮುಕ್ತ ಚರ್ಚೆ ನಡೆದರೆ ಮೋದಿ ಅವರು ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಉದ್ದನೆಯ ಭಾಷಣಗಳ ಬದಲಿಗೆ ದೇಶದ ಪ್ರಮುಖ ಸಮಸ್ಯೆಗಳ ಕುರಿತು ಇಬ್ಬರೂ ನಾಯಕರು ಮುಖಾಮುಖಿಯಾಗಿ ಚರ್ಚಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಚರ್ಚೆಯ ವೇಳೆ ಒಂದು ಬದಿಯಲ್ಲಿ ಪ್ರಧಾನಿ ಮೋದಿ ಹಾಗೂ ಮತ್ತೊಂದು ಬದಿಯಲ್ಲಿ ತಾವು ಕುಳಿತುಕೊಳ್ಳುವುದಾಗಿ ತಿಳಿಸಿರುವ ರಾಹುಲ್, ಚರ್ಚೆಗೆ ನಿರ್ಣಾಯಕರಾಗಿ ಉದ್ಯಮಿ ಗೌತಮ್ ಅದಾನಿ ಅಥವಾ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಆಯ್ಕೆ ಮಾಡಿದರೂ ತಮ್ಮ ಅಭ್ಯಂತರವಿಲ್ಲ ಎಂದಿದ್ದಾರೆ.
ಕೃಷಿ ಮಸೂದೆಗಳು, ಮತದಾರರ ಪಟ್ಟಿ ಪರಿಷ್ಕರಣೆ ವಿವಾದ, ಚೀನಾ ಗಡಿ ಸಮಸ್ಯೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಸಂಸತ್ತಿನಲ್ಲಿ ತಮ್ಮ ಧ್ವನಿಯನ್ನು ಹತ್ತಿಕ್ಕಲಾಗಿದೆ. ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಯಾರು ನಡೆದುಕೊಳ್ಳುತ್ತಿದ್ದಾರೆ, ಯಾರು ವಿದೇಶಿ ಶಕ್ತಿಗಳ ನಿಯಂತ್ರಣದಲ್ಲಿದ್ದಾರೆ ಎಂಬ ವಿಚಾರಗಳ ಕುರಿತು ಎಲ್ಲಿಯಾದರೂ, ಯಾವಾಗ ಬೇಕಾದರೂ ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯನ್ನು ಖಂಡಿಸಿರುವ ಅವರು, ತಮ್ಮೊಂದಿಗೆ ಚರ್ಚೆ ನಡೆಸಿದ ಬಳಿಕ ಪ್ರಧಾನಿಗೆ ಯೋಧರ ಎದುರು ನಿಲ್ಲುವ ಧೈರ್ಯವೂ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನಾಯಕರಿಂದ ತಿರುಗೇಟು
ರಾಹುಲ್ ಗಾಂಧಿ ಅವರ ಸವಾಲಿಗೆ ಬಿಜೆಪಿ ನಾಯಕರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ತಿನಲ್ಲಿ ಚರ್ಚೆಗೆ ಅವಕಾಶವಿದ್ದರೂ ರಾಹುಲ್ ಗಾಂಧಿ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಆಡಳಿತ ಪಕ್ಷದ ಪ್ರಮುಖ ನಾಯಕರು, ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಧಾನಿಯನ್ನು ಸಂಸತ್ತಿನ ಹೊರಗಿನ ವೇದಿಕೆಗೆ ಆಹ್ವಾನಿಸುವ ಬದಲು ಸಂಸತ್ತಿನಲ್ಲೇ ಲಭ್ಯವಿರುವ ಚರ್ಚೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
