ದೇವನಹಳ್ಳಿ: ತಾಲೂಕಿನ ಜಾಲಿಗೆ ಗ್ರಾಮದಲ್ಲಿ ಜಾಲಿಗೆ ಅಂಬೇಡ್ಕರ್ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಏಳು ಅಡಿ ಎತ್ತರದ ಪುತ್ಥಳಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಅನಾವರಣಗೊಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ, ದೇಶದ ಎಲ್ಲಾ ಜಾತಿ, ವರ್ಗ ಹಾಗೂ ಧರ್ಮಗಳ ಜನರ ಸರ್ವತೋಮುಖ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿಕೊಟ್ಟಿದ್ದಾರೆ. ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ದೇಶದ ಅಭಿವೃದ್ಧಿಗೆ ಸಂವಿಧಾನವೇ ಮೂಲ ಆಧಾರವಾಗಿದೆ ಎಂದು ಹೇಳಿದರು.
ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರು ದೇಶದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಮಹಾನ್ ನಾಯಕರು. ಇಂತಹ ಇಬ್ಬರು ಮಹಾನ್ ವ್ಯಕ್ತಿಗಳ ಪುತ್ಥಳಿಗಳನ್ನು ಒಂದೇ ಸ್ಥಳದಲ್ಲಿ ಪ್ರತಿಷ್ಠಾಪಿಸುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಮಾನತೆಯ ಸಂದೇಶವನ್ನು ಜಾಲಿಗೆ ಗ್ರಾಮ ಸಾರಿದೆ. ಈ ಕಾರ್ಯಕ್ರಮ ಅರ್ಥಪೂರ್ಣವಾಗಿದ್ದು, ಸಂತಸ ತಂದಿದೆ ಎಂದರು.
ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್, ಜವಾಹರಲಾಲ್ ನೆಹರು ಹಾಗೂ ಬಾಬು ಜಗಜೀವನ್ ರಾಮ್ ಸೇರಿದಂತೆ ಅನೇಕ ನಾಯಕರು ಹೋರಾಟ ನಡೆಸಿದ್ದಾರೆ. ಹಲವಾರು ವರ್ಷಗಳ ಜೈಲುವಾಸ ಅನುಭವಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ನೆಹರು ಅವರು ಮಾಡಿದ ತ್ಯಾಗ ಸ್ಮರಣೀಯವಾಗಿದೆ. ಮಹಾತ್ಮ ಗಾಂಧೀಜಿ ಮತ್ತು ಜವಾಹರಲಾಲ್ ನೆಹರು ಅವರ ನೇತೃತ್ವದ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರ ಜವಾಬ್ದಾರಿ ನೀಡುವ ಮೂಲಕ ದೇಶಕ್ಕೆ ಭವ್ಯ ಸಂವಿಧಾನ ದೊರೆಯಲು ಕಾರಣವಾಯಿತು ಎಂದು ಸ್ಮರಿಸಿದರು.
ಒಳಮೀಸಲಾತಿ ಹೋರಾಟಕ್ಕೆ ತೆರೆ
ಸುಮಾರು 40 ವರ್ಷಗಳ ಸುದೀರ್ಘ ಹೋರಾಟದ ಫಲವಾಗಿ ಒಳಮೀಸಲಾತಿ ಜಾರಿಗೊಳಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ಅನುಷ್ಠಾನಗೊಂಡಿದೆ. ಒಳಮೀಸಲಾತಿ ವಿಚಾರದಲ್ಲಿ ಅಣ್ಣ-ತಮ್ಮಂದಿರ ನಡುವಿನ ವೈಮನಸ್ಸಿನಂತಿದ್ದ ಸಮಸ್ಯೆಗೆ ಪರಿಹಾರ ದೊರೆತಿದೆ. ಇನ್ನು ಮುಂದೆ ನಾವೆಲ್ಲರೂ ಅಣ್ಣ-ತಮ್ಮಂದಿರಂತೆ ಒಗ್ಗಟ್ಟಿನಿಂದ ಇರಬೇಕು. ಹೋರಾಟಗಳು ಅನಿವಾರ್ಯವಾದ ಸಂದರ್ಭದಲ್ಲಿ ಮಾತ್ರ ನಡೆಯಬೇಕು. ಮುಂದುವರಿದ ಸಮುದಾಯಗಳೊಂದಿಗೆ ಪ್ರೀತಿ, ವಿಶ್ವಾಸ ಹಾಗೂ ಸೌಹಾರ್ದತೆಯಿಂದ ಸಾಗಿದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು.
ದೇವನಹಳ್ಳಿ ತಾಲೂಕಿನಲ್ಲಿ ರಸ್ತೆ, ಚರಂಡಿ, ಯುಜಿಡಿ ಸೇರಿದಂತೆ ಅಗತ್ಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ದೇವನಹಳ್ಳಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದು ನನ್ನ ಸಂಕಲ್ಪವಾಗಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪಾಲನಹಳ್ಳಿ ಮಠದ ಪೀಠಾಧ್ಯಕ್ಷರಾದ ಸಿದ್ದರಾಜು ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ಡಿಸಿಸಿ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಗನ್ನಾಥ್, ಮಾಜಿ ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ಜಾಲಿಗೆ ಮುನಿರಾಜು, ಬುಲ್ಲಹಳ್ಳಿ ರಾಜಪ್ಪ ಸೇರಿದಂತೆ ಹಲವು ಮುಖಂಡರು, ದಲಿತ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
