ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವಾಕಾಂಕ್ಷಿ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಮತ್ತು ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಚಾಲನೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಯೋಜನೆಗಳ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು, ಹಳ್ಳಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಗ್ರಾಮಗಳ ಅಭಿವೃದ್ಧಿಗೆ ಹೊಸ ವೇಗ ನೀಡುವುದು ಈ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ. ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆ, ಸಂಪರ್ಕ ವ್ಯವಸ್ಥೆ ಬಲಪಡಿಸುವುದು ಮತ್ತು ಅಭಿವೃದ್ಧಿಯ ಸೌಲಭ್ಯಗಳನ್ನು ಕಟ್ಟಕಡೆಯ ಗ್ರಾಮಗಳಿಗೂ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಗಳನ್ನು ರೂಪಿಸಿದೆ.
ಗ್ರಾಮೀಣ ರಸ್ತೆ ಸಂಪರ್ಕ ಸುಧಾರಣೆಯಿಂದ ರೈತರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಹಳ್ಳಿಗಳಿಂದ ನಗರ ಪ್ರದೇಶಗಳಿಗೆ ಸಂಚಾರ ಸುಲಭವಾಗುವುದರ ಜೊತೆಗೆ ಕೃಷಿ ಉತ್ಪನ್ನಗಳ ಸಾಗಣೆ ಮತ್ತು ಗ್ರಾಮೀಣ ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ.
ಶಾಸಕರಾದ ಎನ್.ಎಚ್. ಕೋನರೆಡ್ಡಿ, ರಹೀಮ್ ಖಾನ್, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಫೌಜಿಯಾ ತರನ್ನಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
