ಬೆಂಗಳೂರು: ಬಸವಣ್ಣನವರ ಕುರಿತು ವಿವಾದಕ್ಕೆ ಕಾರಣವಾಗಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಸವಣ್ಣನವರು ಕರ್ನಾಟಕದ ಸಾಂಸ್ಕೃತಿಕ ನಾಯಕರು ಮಾತ್ರವಲ್ಲದೆ, ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ಅವರ ತತ್ವ, ಆದರ್ಶ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ಸರ್ಕಾರಗಳು ಬಸವಣ್ಣನವರ ಚಿಂತನೆಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತಿವೆ. ದೆಹಲಿಯಲ್ಲಿಯೂ ಅವರ ಪ್ರತಿಮೆ ಸ್ಥಾಪಿಸಲಾಗಿದೆ. ರಾಜ್ಯದ ಪ್ರತಿಯೊಂದು ಗ್ರಾಮ, ಮನೆ, ಶಾಲೆ ಹಾಗೂ ಕಚೇರಿಗಳಲ್ಲಿ ಬಸವಣ್ಣನವರ ಆಚಾರ-ವಿಚಾರಗಳನ್ನು ಪರಿಚಯಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
‘ಬಸವ ಮಂಟಪ’ ಕೃತಿ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬೆಳವಣಿಗೆಯಿಂದ ಕರ್ನಾಟಕಕ್ಕೆ ದೊಡ್ಡ ಅಗೌರವ ಉಂಟಾಗಿದೆ. ಸಮಾಜದಲ್ಲಿ ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸುವ ಪ್ರಯತ್ನಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದ್ದು, ಸಂಪುಟದ ಎಲ್ಲ ಸದಸ್ಯರು ಒಮ್ಮತದಿಂದ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿಸಿದರು.
ಬಸವ ಸಮಿತಿಯೂ ಈ ಕುರಿತು ಸರ್ಕಾರಕ್ಕೆ ಪತ್ರ ಬರೆದಿತ್ತು. ರಾಜ್ಯದಲ್ಲಿ ಪ್ರತಿಭಟನೆಗಳು ನಡೆದು ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಕೃತಿಯ ಹಿಂದೆ ಇರುವವರನ್ನು ಪತ್ತೆಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕಾವೇರಿ ನೀರು ಹಂಚಿಕೆ: ರಾಜ್ಯದ ಹಿತಾಸಕ್ತಿಯೇ ಮುಖ್ಯ
ಇದೇ ವೇಳೆ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ನೀರಿನ ಲಭ್ಯತೆ ಇದ್ದರೆ ತಮಿಳುನಾಡಿಗೆ ನೀರು ನೀಡಲು ಸಿದ್ಧವಿದ್ದೇವೆ. ಆದರೆ ಸದ್ಯ ಕರ್ನಾಟಕದಲ್ಲಿಯೇ ಕುಡಿಯುವ ನೀರಿನ ಕೊರತೆ ಇದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಜನರ ಹಿತಾಸಕ್ತಿ ಮತ್ತು ರೈತರ ರಕ್ಷಣೆ ಸರ್ಕಾರದ ಆದ್ಯತೆಯಾಗಿದೆ ಎಂದರು.
ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ರಾಜ್ಯದ ಜಲಾಶಯಗಳಲ್ಲಿ ಎಷ್ಟು ನೀರಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಈ ಬಾರಿ ಜಲಾಶಯಗಳಿಗೆ ಬಾಗಿನ ಅರ್ಪಿಸಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರು ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದೇನೆ. ನ್ಯಾಯಾಲಯದ ಆದೇಶದ ಬಗ್ಗೆಯೂ ಪಕ್ಷದ ಅಧ್ಯಕ್ಷರಿಗೆ ಮಾಹಿತಿ ನೀಡುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
