ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಒಂದು ವಾರದಿಂದ ಹಗಲು-ರಾತ್ರಿ ಎನ್ನದೆ ಚಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಸಂಕಷ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸ್ಪಂದಿಸಬೇಕಿತ್ತು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಜಪಾನ್ ಪ್ರವಾಸದಿಂದ ವಾಪಸ್ ಬಂದ ಬಳಿಕವಾದರೂ ಮುಖ್ಯಮಂತ್ರಿಗಳು ಆಶಾ ಕಾರ್ಯಕರ್ತೆಯರ ನೋವಿಗೆ ಸ್ಪಂದಿಸಬಹುದು ಎಂಬ ನಿರೀಕ್ಷೆ ಇದೆ ಎಂದು ವ್ಯಂಗ್ಯವಾಡಿದ್ದಾರೆ.
ಜೆಡಿಎಸ್‌ನ ಕೇಂದ್ರ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಅವರ ಜೀವನ ನಿರ್ವಹಣೆ ಇಂದಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆಂಬ ಭೇದವಿಲ್ಲದೆ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು ಎಂದರು.
ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ. ಹಣಕಾಸು ಇಲಾಖೆಯೂ ಮುಖ್ಯಮಂತ್ರಿಗಳ ಬಳಿಯೇ ಇದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನವೇ ಆಶಾ ಕಾರ್ಯಕರ್ತೆಯರ ಕುರಿತು ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ನುಡಿದಂತೆ ನಡೆದಿದ್ದೇವೆ ಎಂದು ಹೇಳುವ ಮುಖ್ಯಮಂತ್ರಿಗಳು ಈ ಮಹಿಳೆಯರ ಸಂಕಷ್ಟಕ್ಕೆ ಏಕೆ ಸ್ಪಂದಿಸುತ್ತಿಲ್ಲ ಎಂದು ಪ್ರಶ್ನಿಸಿದರು.
‘ಮುಖ್ಯಮಂತ್ರಿಗಳದ್ದು ಬಂಡೆಯಂತಹ ಹೃದಯವಲ್ಲ, ಹೂವಿನಂತಹ ಹೃದಯ. ಇಷ್ಟೊತ್ತಿಗೆ ಅವರ ಮನಸ್ಸು ಕರಗಬೇಕಿತ್ತು. ಬಹುಶಃ ಜಪಾನ್ ಪ್ರವಾಸದಿಂದ ಬಂದ ಬಳಿಕ ಆಶಾ ಕಾರ್ಯಕರ್ತೆಯರ ನೋವಿಗೆ ಸ್ಪಂದಿಸಬಹುದು’ ಎಂದು ಲೇವಡಿ ಮಾಡಿದರು.
ಇದೇ ವೇಳೆ ಬರ ಪರಿಹಾರ ವಿಚಾರವಾಗಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗುವ ಕುರಿತು ಪ್ರತಿಕ್ರಿಯಿಸಿದ ಅವರು, ನೈಸ್ ಯೋಜನೆ ವಿವಾದದಲ್ಲಿ ಲಂಡನ್ ನ್ಯಾಯಾಲಯಕ್ಕೆ ಹೋಗುವ ನಿರ್ಧಾರ ಕೈಗೊಂಡವರು ಯಾರು ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ತಾವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದೊಂದಿಗೆ ಸಂಘರ್ಷಕ್ಕೆ ಇಳಿದಿರಲಿಲ್ಲ. ಕೊಡಗಿನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಿಕೊಡುವುದರ ಜತೆಗೆ, ಮನೆ ನಿರ್ಮಾಣವಾಗುವವರೆಗೆ ಪ್ರತಿ ಕುಟುಂಬಕ್ಕೂ ತಿಂಗಳಿಗೆ ₹10 ಸಾವಿರ ಬಾಡಿಗೆ ನೀಡಿದ್ದಾಗಿ ತಿಳಿಸಿದರು.
ಹಿರಿಯೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಯಾವುದೇ ಆತುರವಿಲ್ಲ. ಮೈತ್ರಿ ಪಕ್ಷದಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಷ್ಟೇ ಆದ್ಯತೆ ಎಂದರು. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗುವುದು. ಅಗತ್ಯವಿದ್ದರೆ ಬಿಜೆಪಿ ಜತೆಗೂ ಸಭೆ ನಡೆಸುತ್ತೇವೆ ಎಂದು ಹೇಳಿದರು.
ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವ ವಿಚಾರವಾಗಿ ಪ್ರಮೋದ್ ಮುತಾಲಿಕ್ ಬಂದಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.
