ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಈ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಮಹತ್ವದ ಆದೇಶ ನೀಡಿದೆ.
ಬಿಜೆಪಿ ಸದಸ್ಯ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಗಳನ್ನು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದೀಗ ಪ್ರಕರಣವನ್ನು ಮತ್ತೆ ಹೈಕೋರ್ಟ್ಗೆ ಕಳುಹಿಸಿರುವ ಸುಪ್ರೀಂ ಕೋರ್ಟ್, ಅರ್ಜಿಯ ವಿಚಾರಣೆಯನ್ನು ಹೊಸದಾಗಿ ನಡೆಸುವಂತೆ ಸೂಚಿಸಿದೆ.
ವಿಶೇಷವಾಗಿ, ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಅರ್ಹವಾಗಿದೆಯೇ ಎಂಬ ಪ್ರಾಥಮಿಕ ಪ್ರಶ್ನೆ ಸೇರಿದಂತೆ ಅರ್ಜಿಗೆ ಸಂಬಂಧಿಸಿದ ಎಲ್ಲ ಅಂಶಗಳ ಕುರಿತು ರಾಹುಲ್ ಗಾಂಧಿ ಅವರ ವಾದವನ್ನು ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಈ ಹಿಂದೆ ಕೂಡ ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ನಿರ್ದೇಶನಗಳನ್ನು ನೀಡಿತ್ತು. ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣದಲ್ಲಿ ಮುಂದಿನ ಕ್ರಮ ಕೈಗೊಳ್ಳದಂತೆ ಅಲಹಾಬಾದ್ ಹೈಕೋರ್ಟ್ಗೆ ಸೂಚಿಸಿತ್ತು. ಅಲ್ಲದೆ, ಹೈಕೋರ್ಟ್ನ ನಿರ್ದೇಶನಗಳ ಆಧಾರದ ಮೇಲೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಇಡಿಗೂ ತಿಳಿಸಿತ್ತು.
ಏನಿದು ಪ್ರಕರಣ?
ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅಲಹಾಬಾದ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ, ರಾಹುಲ್ ಗಾಂಧಿ ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಅವರ ಕುಟುಂಬದ ಇತರ ಸದಸ್ಯರ ಆಸ್ತಿ ಮತ್ತು ಆದಾಯದ ಮೂಲಗಳ ಕುರಿತು ತನಿಖೆ ನಡೆಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.
ಆದರೆ, ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ನ ಹಿಂದಿನ ಆದೇಶವನ್ನು ರದ್ದುಗೊಳಿಸಿರುವುದರಿಂದ ಪ್ರಕರಣದ ಮುಂದಿನ ವಿಚಾರಣೆ ಮತ್ತೆ ಅಲಹಾಬಾದ್ ಹೈಕೋರ್ಟ್ನಲ್ಲಿ ನಡೆಯಲಿದೆ. ಅರ್ಜಿಯ ಸ್ವೀಕಾರಾರ್ಹತೆ ಹಾಗೂ ಆರೋಪಗಳ ಕುರಿತು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಹೈಕೋರ್ಟ್ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.
