ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ, ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ
ದೆಹಲಿಯಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ. ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಟೆಂಡರ್ ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ 30 ರಿಂದ 40% ರಷ್ಟು ಮೀಸಲಾತಿ ನೀಡಿದರೆ, ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ!
ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ದ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಅಂತ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಅಂತ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುಂಚೆ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ, ಸಂವಿಧಾನದ ಮೂಲ ಉದ್ದೇಶವನ್ನೇ ಬದಲಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ. ಸಂವಿಧಾನದ ಮೇಲೆ ಪ್ರಮಾಣ ವಚನ ತೆಗೆದುಕೊಂಡು ಅದರ ವಿರುದ್ದ ಕೆಲಸ ಮಾಡುತ್ತಾರೆ ಎಂದರೆ ಇದು ಸಂವಿಧಾನ ವಿರೋಧಿ ಅಷ್ಟೇ ಅಲ್ಲ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಕ್ಕೂ ವಿರುದ್ದವಾಗಿದೆ. ತುಷ್ಟೀಕರಣದ ಪರಾಕಾಷ್ಟೇ ಮೀರಿದೆ. ತುಷ್ಟೀಕರಣಕ್ಕಾಗಿ ದೇಶವನ್ನು ಒಡೆಯುವ ತೀರ್ಮಾನ ತೆಗೆದುಕೊಳ್ಳುವುದು ಸಂವಿಧಾನಿಕ ಹುದ್ದೆಯಲ್ಲಿರುವವರಿಗೆ ಇದು ನ್ಯಾಯಾನಾ ಎಂದು ಪ್ರಶ್ನಿಸಿದರು.
ಸ್ವಾತಂತ್ರ್ಯ ಬಂದಾಗ ಕಾಂಗ್ರೆಸ್ ನವರು ತನ್ನ ಆಡಳಿತಕ್ಕಾಗಿ ದೇಶ ವಿಭಜನೆ ಮಾಡಿದರು. ಶಾಭಾನು ಪ್ರಕರಣದಲ್ಲಿ ಕುರ್ಚಿ ಉಳಿಸಿಕೊಳ್ಳಲು ಕಾನೂನು ಬದಲಾವಣೆ ಮಾಡಿದ್ದರು. ಈಗ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ರಾಹುಲ್ ಗಾಂಧಿಯವರಿಗೆ ಇನ್ನು ಮುಂದೆ ಸಂವಿಧಾನವನ್ನು ಹಿಡಿಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ. ಈ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
