ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೋಮವಾರ ಜೂನ್ 23) ಸಂಜೆ ರಾಷ್ಟ್ರದ ರಾಜಧಾನಿ ದೆಹಲಿ ಪ್ರವಾಸ ಕೈಗೊಂಡಿದ್ದು, ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಹಣಕಾಸು ಸಚಿವರಾಗಿರುವಂತಹ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಹಲವು ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಜೊತೆಗೆ ಇತರ ಇಲಾಖೆಗಳ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೆ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಕೂಡ ಭೇಟಿಯಾಗಿ ರಾಜ್ಯ ರಾಜಕೀಯದ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ: ಆಡಿಯೋ ವೈರಲ್; ಬಿ.ಆರ್ ಪಾಟೀಲ್ಗೆ ಸಿಎಂ ಕರೆ..!
ಇನ್ನು ಮಂಗಳವಾರ ರಾಷ್ಟ್ರಪತಿ ಭೇಟಿಗೆ ಸಮಯ ಕೇಳಿದ್ದು, 5 ಪ್ರಮುಖ ವಿಧೇಯಕಗಳು ಸೇರಿ ಸುಮಾರು 24 ವಿಧೇಯಕಗಳಿಗೆ ರಾಜ್ಯಪಾಲರು ಇನ್ನೂ ಅಂಕಿತ ಹಾಕಿಲ್ಲ. ಈ ಹಿನ್ನೆಲೆ ಗವರ್ನರ್ ವಿರುದ್ಧ ಸಿಎಂ ದೂರು ನೀಡುವ ಸಾಧ್ಯತೆಯೂ ಇದೆ. ಬಿಲ್ಗಳಿಗೆ ಅಂಕಿತ ಹಾಕಿಸಲು ರಾಷ್ಟ್ರಪತಿಗಳಿಗೆ ಮನವರಿಕೆ ಮಾಡಿ ಮನವಿ ಸಲ್ಲಿಸಲಿದ್ದಾರೆ. ಇನ್ನು, ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೆರವು ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರಲ್ಲಿ ಸಿಎಂ ಕೇಳಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
