ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 495 ಎಕರೆ ರೈತರ ಜಮೀನುಗಳ ಸರ್ಕಾರದ ಭೂಸ್ವಾಧೀನವನ್ನು ವಿರೋಧಿಸುವ ರೈತರ ಹೋರಾಟದಲ್ಲಿ ಆಮ್ ಆದ್ಮಿ ಪಕ್ಷ ಇಂದು (ಬುಧವಾರ ಜೂನ್ 25) ಭಾಗವಹಿಸಿ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿತು. ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ರೈತರ ಹೋರಾಟದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು, ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಹಾಗೂ ಇನ್ನಿತರ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭಾಗವಹಿಸಿದ್ದರು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ನುಡಿದಂತೆ ನಡೆಯುವ ಸರ್ಕಾರವೆಂದು ಪದೇ ಪದೇ ಕೊಚ್ಚಿಕೊಳ್ಳುವ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದಲ್ಲಿ ಇರುವಾಗ ಈ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿತ್ತು. ಆದರೆ ಅಧಿಕಾರಕ್ಕೆ ಬಂದ ಕೂಡಲೇ ತಮ್ಮ ನಿಲುವನ್ನು ಬದಲಾಯಿಸಿ ರಿಯಲ್ ಎಸ್ಟೇಟ್ ಮಾಫಿಯಾಗಳ ಒತ್ತಡಗಳಿಗೆ ಬಲಿಯಾಗಿರುವುದು ನಿಜಕ್ಕೂ ಶೋಭೆ ತರುವ ವಿಚಾರವಲ್ಲ.
ಕೊನೆಗೂ ರೈತರ ಹೋರಾಟಕ್ಕೆ ಮಣಿದಿರುವ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಟ್ಟಿರುವುದು ನಮಗೆಲ್ಲರಿಗೂ ಸಂದ ಜಯ. ರಾಜ್ಯದಲ್ಲಿ ಎಲ್ಲೇ ಆದರೂ ಈ ರೀತಿಯ ಅಕ್ರಮ ಭೂಸ್ವಾಧೀನ ಗಳನ್ನು ಪಕ್ಷವು ಸದಾ ವಿರೋಧಿಸಿ ರೈತರ ಜೊತೆಯಲ್ಲಿ ನಿಲ್ಲುತ್ತೇವೆ ಎಂದು ಮುಖ್ಯಮಂತ್ರಿ ಚಂದ್ರು ಸಭೆಯಲ್ಲಿ ಘೋಷಿಸಿದರು. ಇದನ್ನೂ ಓದಿ: ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಮಹತ್ವ ಸಭೆ
ಧರಣಿಯಲ್ಲಿ ಭಾಗವಹಿಸಿದ್ದ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ಮಾತನಾಡಿ, ಕೆ ಐ ಎ ಡಿ ಬಿ ಸಂಸ್ಥೆಯು ರಿಯಲ್ ಎಸ್ಟೇಟ್ ಮಾಫಿಯಾಗಳ ಅಡ್ಡೆ ಯಾಗಿದೆ. ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕೈಗಾರಿಕೆಗಳ ಸ್ಥಾಪನೆಯ ಹೆಸರಿನಲ್ಲಿ ಭ್ರಷ್ಟರು ಹಾಗೂ ಪ್ರಭಾವಿ ರಾಜಕಾರಣಿಗಳು ಬಡ ರೈತರ ಜಮೀನುಗಳನ್ನು ಕಿತ್ತುಕೊಂಡು ಸಹಸ್ರಾರು ಕೋಟಿ ರೂಗಳ ಕೊಳ್ಳೆ ಹೊಡೆಯುತ್ತಿದ್ದಾರೆ . ಈ ಅಕ್ರಮಗಳ ವಿರುದ್ಧ ಆಮ್ ಆದ್ಮಿ ಪಕ್ಷವು ಸದಾ ಹೋರಾಟದಲ್ಲಿ ರೈತರುಗಳ ಜೊತೆ ನಿಲ್ಲುತ್ತದೆ ಎಂದು ತಿಳಿಸಿದರು.
ಧರಣಿ ಸತ್ಯಾಗ್ರಹದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ಸುರೇಶ್, ಮಾಲೂರು ನಾಗರಾಜ್ ಸೇರಿದಂತೆ ಅನೇಕ ಮುಖಂಡರುಗಳು ಕಾರ್ಯಕರ್ತರಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
