ಬೆಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜು.19 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ‘ಸರ್ಕಾರದ ಸಾಧನೆಗಳ ಸಮಾವೇಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ ಬೃಹತ್ ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಇಂದು ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆಯನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪನವರ ನೇತೃತ್ವದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ಜನಪ್ರತಿನಿಧಿಗಳು, ಅಧಿಕಾರಿವರ್ಗದವರು ಹಾಗೂ ಮುಖಂಡರೊಡನೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾತನಾಡಿದ ಸಚಿವರು, ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸುಸಜ್ಜಿತ ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆಯನ್ನು ಬಹಳ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರೆಲ್ಲರೂ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಡಿಸಿಎಂ ಡಿಕೆ ಶಿವಕುಮಾರ್ ಅವರ ನೆಚ್ಚಿನ ನಟಿ ಯಾರು ಗೊತ್ತಾ..?
ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಆರ್.ನರೇಂದ್ರ, ಸುನೀತ ವೀರಪ್ಪಗೌಡ, ಕಳಲೆ ಕೇಶವಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಷೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜೆ.ವಿಜಯಕುಮಾರ್, ಆರ್.ಮೂರ್ತಿ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
