ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು ಸಂಪರ್ಕಿಸುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸುಮಾರು 2.1 ಕಿಲೋಮೀಟರ್ ಉದ್ದವಿರುವ ಈ ಸೇತುವೆ ದೇಶದ 2ನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆ ಆಗಿದೆ.
ಇನ್ನು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ನಿರ್ಮಿಸಿರುವ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋಗುತ್ತಿಲ್ಲ. ಸಿದ್ದರಾಮಯ್ಯ ಅವರು ಸಿಗಂದೂರು ಸೇತುವೆ ಉದ್ಘಾಟನೆಗೆ ಯಾಕೆ ಹೋಗುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ನನಗೆ ಪೂರ್ವನಿಯೋಜಿತ ಕಾರ್ಯಕ್ರಮಗಳಂತೆ ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ, ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದರು. ಇದನ್ನೂ ಓದಿ: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಸಂಬಂಧಪಟ್ಟ ಸಾಗರ ತಾಲ್ಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರನ್ನಾಗಲೀ, ಸ್ಥಳೀಯ ಶಾಸಕರನ್ನಾಗಲೀ ಆಮಂತ್ರಣ ನೀಡಲಾಗಿಲ್ಲ ಎಂದರು.
