ಬೆಂಗಳೂರು: ಇ.ಡಿ ಸಂಸ್ಥೆ ಹಸ್ತಕ್ಷೇಪ, ಕಾರ್ಯವೈಖರಿ ಹಾಗೂ ಎಲ್ಲೆ ಮೀರಿ ವರ್ತನೆ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಇದೇ ಮೊದಲಲ್ಲ. ಕಳೆದ 2 ವರ್ಷಗಳಿಂದ ಸುಪ್ರೀಂ ಕೋರ್ಟ್ ಈ ವಿಚಾರವಾಗಿ ಚಾಟಿ ಬೀಸುತ್ತಲೇ ಇದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹತ್ವದ್ದಾಗಿದೆ. ಇ.ಡಿ. ಸಂಸ್ಥೆ ರಾಜಕೀಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ. ಕಳೆದ ವಾರ ಮದ್ರಾಸ್ ಹೈಕೋರ್ಟ್ ಕೂಡ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತ್ತು. ರಾಜಕೀಯ ಪ್ರೇರಿತ ದಾಳಿ ಮಾಡಿ ವಿರೋಧ ಪಕ್ಷಗಳನ್ನು ಬಗ್ಗುಬಡಿಯಲು ಕೇಂದ್ರ ಸರ್ಕಾರ ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿಯಾದರೂ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಬಿಟ್ಟು, ಅಭಿವೃದ್ಧಿ ರಾಜಕಾರಣ ಮಾಡಲಿ. ದೇಶದ ಅಭಿವೃದ್ಧಿ, ಯುವಕರ ಭವಿಷ್ಯ ನಿರ್ಮಾಣ ಮಾಡುವ ಬಗ್ಗೆ, ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಚಿಂತನೆ ಮಾಡಲಿ ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ರಾಜಕೀಯದಲ್ಲಿ ಎಲ್ಲವನ್ನು ಸಹಿಸಲು ಸಿದ್ಧರಾಗಿರುತ್ತಾರೆ. ಕೆಲವರು ಇದನ್ನು ಅಸ್ತ್ರವಾಗಿ ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಸದೆಬಡಿಯುವ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ಷಡ್ಯಂತ್ರ ಆಗಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನ್ಯಾಯಕ್ಕೆ ಗೌರವ ಸಿಕ್ಕಂತಾಗಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಎಂ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆ ಸಭೆ
ನಮ್ಮ ಮೇಲಿನ ಇ.ಡಿ ಪ್ರಕರಣ ವಜಾವಾಗಿದ್ದರೂ ಸಿಬಿಐಗೆ ಪತ್ರ ಬರೆಯುವುದು, ಸಿಬಿಐ ಆದಾಯ ತೆರಿಗೆಗೆ ಪತ್ರ ಬರೆಯುವುದು ಹೀಗೆ ಪ್ರತಿ ಹಂತದಲ್ಲೂ ಯಾವುದಾದರೂ ಪ್ರಕರಣದ ಸುಳಿಯಲ್ಲಿ ಸಿಲುಕಿಸಿ ಸದೆಬಡಿಯುವ ಪ್ರಯತ್ನ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಇಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿಲ್ಲ. ಸರಿ, ತಪ್ಪು ತೀರ್ಮಾನ ಮಾಡಲು ತನಿಖೆ ನಡೆಯುತ್ತಿಲ್ಲ. ಎಲ್ಲಾದರೂ ಒಂದು ಕಡೆ ತಪ್ಪಿಸಿಕೊಂಡರೆ, ಮತ್ತೊಂದು ಕಡೆ ಸಿಲುಕಿಸುವ ಪ್ರವೃತ್ತಿ ಬೆಳೆಸಿಕೊಂಡು ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
