ಚಿಕ್ಕೋಡಿ: ಬಡವರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ವಸತಿ ನಿಲಯದ ಮೊರೆ ಹೋಗುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ವಸತಿ ನಿಲಯಗಳಲ್ಲಿ ಸ್ವಚ್ಛತೆ ಕೊರತೆ ಕಂಡು ಬರುತ್ತಿರುವುದರಿಂದ ಅದೆಷ್ಟೋ ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುತ್ತಿದೆ. ಅದಕ್ಕೆ ಉದಾಹರಣೆ ಎಂಬಂತೆ ಇಂದು (ಶುಕ್ರವಾರ ಸೆಪ್ಟೆಂಬರ್ 12) ಚಿಕ್ಕೋಡಿಯಲ್ಲಿ ನಡೆದ ಘಟನೆಯೇ ಒಂದು ದೊಡ್ಡ ಉದಾಹರಣೆಯಾಗಿದೆ
ಹೌದು, ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು ಸುಮಾರು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. 2 ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್
ಬೆಳಿಗ್ಗೆ ಮಕ್ಕಳು ಉಪ್ಪಿಟ್ಟು ಸೇವಿಸಿದ್ದರು. ಬಳಿಕ ಅವರಿಗೆ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಮಕ್ಕಳನ್ನು ಚಿಕ್ಕೋಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. 6ನೇ ತರಗತಿಯಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ.
