ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಇಂದು (ಶುಕ್ರವಾರ ಅ. 10) ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿರುವ ಬೆಂಗಳೂರು ಉತ್ತರ ನಗರ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಿದರು.
ಫೋನ್–ಇನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಅಹವಾಲುಗಳು ರಸ್ತೆ ಗುಂಡಿಗಳ ಕುರಿತು ಬಂದ ಹಿನ್ನೆಲೆ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ತಕ್ಷಣ ತುಂಬುವಂತೆ ಹಾಗೂ ದುರಸ್ತಿಯ ಅಗತ್ಯವಿರುವ ಮಾರ್ಗಗಳಲ್ಲಿ ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಯುಕ್ತರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ನಾಗರಿಕರ ಸುಗಮ ಸಂಚಾರಕ್ಕೆ ಅನುವಾಗುವಂತೆ ರಸ್ತೆಗಳ ನಿರ್ವಹಣೆಗೆ ಕ್ರಮ ವಹಿಸಲು ಸೂಚಿಸಿದರು.
ಆದ್ಯತೆ ಮೇರೆಗೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ವಹಿಸಿ
ಇಂದು ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಲ್ಲಿ ಹಲವು ಕಡೆ ಬೀದಿ ನಾಯಿಗಳ ಹಾವಳಿ ಕುರಿತ ಸಮಸ್ಯೆಗಳು ಹೆಚ್ಚಾಗಿ ಕೇಳಿ ಬಂದಿರುವುದನ್ನು ಗಮನಿಸಿದ ಆಯುಕ್ತರು ನಗರ ಪಾಲಿಕೆಯಲ್ಲಿರುವ ಅಕ್ರಮಣಕಾರಿ ಬೀದಿ ನಾಯಿಗಳನ್ನು ತಕ್ಷಣ ಆದ್ಯತೆ ಮೇರೆಗೆ ಗುರುತಿಸಿ, ಸೂಕ್ತ ಚಿಕಿತ್ಸೆಗೆ ಒಳಪಡಿಸಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲು ಸ್ಥಳದಲ್ಲಿದ್ದ ಪಶುಪಾಲನ ಅಧಿಕಾರಿಗಳಿಗೆ ಸೂಚನೆ ನೀಡಿದರು.
