ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಸುಮಾರು 500 ಟನ್ ಹಸಿ ಕಸ ಉತ್ಪಾದನೆಯಾಗುತ್ತಿರುವುದರಿಂದ ಇದರಿಂದ ಗ್ಯಾಸ್ ಉತ್ಪಾದನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಹಸಿಕಸದಿಂದ ಗ್ಯಾಸ್ ಉತ್ಪಾದನಾ ಘಟಕ ಸ್ಥಾಪನೆ ಕುರಿತು ಗೇಲ್ ಸಂಸ್ಥೆಯೊಟ್ಟಿಗೆ ಮಾಡಿಕೊಂಡಿರುವ ಒಡಂಬಡಿಕೆ ಹಸ್ತಾಂತರ ನಂತರ ಮಾತನಾಡಿದ ಅವರು, ನಗರದಲ್ಲಿ ಉತ್ಪಾದನೆಯಾಗುವ ಸುಮಾರು 500 ಟನ್ ಹಸಿಕಸದಿಂದ ಗ್ಯಾಸ್ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಸ್ವಾಮ್ಯದ ಗೇಲ್ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಹೇಳಿದರು.
ಗೇಲ್ ಸಂಸ್ಥೆಯವರು 123 ಕೋಟಿ ರೂ. ವೆಚ್ಚದಲ್ಲಿ ಗ್ಯಾಸ್ ತಯಾರಿಕಾ ಘಟಕವನ್ನು ಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇವರಿಗೆ ಸ್ಥಳವನ್ನೂ ನೀಡಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಪ್ರಯೋಗಕ್ಕೆ ಸರ್ಕಾರ ಕೈ ಜೋಡಿಸಿದೆ. ಮುಂದಕ್ಕೂ ಹಲವಾರು ಒಪ್ಪಂದಗಳಿಗೆ ಈ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ಸಿದ್ಧವಿದ್ದೇವೆ ಎಂದರು.
ಇದರಿಂದ ಬೆಂಗಳೂರು ನಗರದ ಕಸದ ಸಮಸ್ಯೆ ಕಡಿಮೆಯಾಗಲಿದೆ. ಇದರಿಂದ ಆದಷ್ಟು ಬೇಗ ಗ್ಯಾಸ್ ಉತ್ಪಾದನೆ ಪ್ರಾರಂಭವಾಗಲಿ. ಇಲ್ಲಿ ಉತ್ಪಾದನೆ ಮಾಡುವ ಗ್ಯಾಸ್ ಅನ್ನು ಸಾರ್ವಜನಿಕರು, ಹೋಟೆಲ್ ಉದ್ದಿಮೆದಾರರಿಗೆ ವಿತರಣೆಯಾಗಲಿ ಎಂದರು.
ಜಿಬಿಎ ಕಸ ಸಮಸ್ಯೆ ನಿರ್ವಹಣೆ ಮಾಡುತ್ತಿಲ್ಲ ಎಂದು ಕಿರಣ್ ಮಜುಂದಾರ್ ಮತ್ತೆ ಎಕ್ಸ್ ಮಾಡಿರುವ ಬಗ್ಗೆ ಕೇಳಿದಾಗ, “ಗೇಲ್ ಸಂಸ್ಥೆಯೊಂದಿಗೆ ಯಾವ ಕೆಲಸ ಮಾಡುತ್ತಿದ್ದೇವೆ? ಕಸ ವಿಲೇವಾರಿಗೆ ನಾವು ಎಲ್ಲಾ ಕೆಲಸ ಮಾಡಿದ್ದೇವೆ. ಆದರೆ ನ್ಯಾಯಾಲಯ ನಮಗೆ ಅಡಚಣೆ ತಂದಿತ್ತು. ಇದರ ಹಿಂದೆ ದೊಡ್ಡ ತಂಡವೇ ಕೆಲಸ ಮಾಡುತ್ತಿದೆ. ಅವರುಗಳು ಯಾರೂ ನಮಗೆ ಸಹಕಾರ ನೀಡಲಿಲ್ಲ. ಈಗ 33 ಪ್ಯಾಕೇಜ್ ಗಳಲ್ಲಿ ಕಸ ವಿಲೇವಾರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ವಿಲೇವಾರಿ ಘಟಕಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಇದು ಮುಂದಕ್ಕೆ ನಿರಂತರವಾಗಿ ನಡೆದುಕೊಂಡು ಹೋಗುತ್ತದೆ ಎಂದರು. ಇದನ್ನೂ ಓದಿ: ಬೋವಿ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ರಾಮಪ್ಪ ಎಂ ಆಯ್ಕೆ
ಸರ್ಕಾರದ ಅಧಿಕಾರಿಗಳು, ಜಿಬಿಎ ಆಯುಕ್ತರು, ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ನನ್ನ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಗೇಲ್ ಸಂಸ್ಥೆಯ ಜೊತೆಗಿನ ಒಡಂಬಡಿಕೆಗಳನ್ನ ಹಸ್ತಾಂತರ ಮಾಡಿಕೊಂಡಿದ್ದಾರೆ” ಎಂದು ಹೇಳಿದರು.
