ಬೆಂಗಳೂರು: ನಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಆಸೆಯಿದೆ ಎಂದು ಹೇಳಿದ್ದೆ. ಅವರ ಹಣೆಯಲ್ಲಿ ಬರೆದಿದ್ದರೆ ಅದು ಆಗುತ್ತದೆ, ಇಲ್ಲದಿದ್ದರೆ ಇಲ್ಲ. ಪಕ್ಷ ಹೇಳಿದಂತೆ ಅವರು ನಡೆದುಕೊಳ್ಳುತ್ತಾರೆ. ಪಕ್ಷದ ಅಧ್ಯಕ್ಷರಾಗಿ, ಡಿಸಿಎಂ ಆಗಿ ಪಕ್ಷದ ಏಳಿಗೆಗೆ, ಘನತೆಗೆ ಚ್ಯುತಿ ಬರದಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದರು. ಪಕ್ಷದ ಅಧ್ಯಕ್ಷರಾಗಿ ಎಲ್ಲರನ್ನೂ ಸಮಾನವಾಗಿ ನೋಡಬೇಕಿರುವುದು ಅವರ ಕರ್ತವ್ಯ ಎಂದು ಹೇಳಿದರು.
ನನಗೆ ನವೆಂಬರ್ ಎಂದರೆ ಕನ್ನಡ ರಾಜ್ಯೋತ್ಸವ ನೆನಪಾಗುತ್ತದೆ. ನಾವು, ನೀವೆಲ್ಲರೂ ಸೇರಿ ಈ ಹಬ್ಬವನ್ನು ಆಚರಣೆ ಮಾಡೋಣ. ಮಿಕ್ಕ ವಿಚಾರಗಳ ಬಗ್ಗೆ ನನಗೆ ತಿಳಿದಿಲ್ಲ. ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಯವರು, ಎಐಸಿಸಿ ನಾಯಕರಿಗೆ ಕೇಳಬೇಕು ಎಂದರು. ಇದನ್ನೂ ಓದಿ: ಬೋಯಿಂಗ್ ಜತೆಗಿನ ಸಹಭಾಗಿತ್ವ ದೊಡ್ಡ ಮೈಲಿಗಲ್ಲು: ಎಂ ಬಿ ಪಾಟೀಲ
2028 ಕ್ಕೆ ಸಿದ್ದರಾಮಯ್ಯ ಅವರ ಸ್ಪರ್ಧೆ ತಪ್ಪಿಲ್ಲ
ರಾಜಕೀಯದಲ್ಲಿ 95-98 ವರ್ಷ ಆದವರೂ ಇದ್ದಾರೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತೇನೆ ಎನ್ನುವುದರಲ್ಲಿ ಯಾವ ತಪ್ಪೂ ಇಲ್ಲ. ಅವರು ನಮ್ಮ ನಾಯಕರು. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದರು.
ಒಬ್ಬ ನಾಯಕನಿಗೆ ಇರಬೇಕಾದ ಎಲ್ಲಾ ಅವಕಾಶಗಳು ಅವರಿಗಿದೆ. ಎಲ್ಲರಿಗಿಂತ ಗಟ್ಟಿಯಾಗಿ, ಚೆನ್ನಾಗಿ ಓಡಾಡುತ್ತಿದ್ದಾರೆ. ದಿನನಿತ್ಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉತ್ತಮವಾಗಿ ಆಡಳಿತ ನಡೆಯುತ್ತಿದೆ. ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದರಲ್ಲಿ ತಪ್ಪೇನಿಲ್ಲ ಎಂದರು.
