ದೆಹಲಿ: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಹಾಗೂ ಸಂಪುಟ ಪುನರ್ ರಚನೆ ಮಾಡಲಾಗುತ್ತದೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದ್ದು, ಇಂದು (ಶನಿವಾರ ನ. 15) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲ ಮೂಡಿಸಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಸಭೆ ನಡೆಸಿದ್ದಾರೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ.
ಸಚಿವ ಸಂಪುಟ ಪುನರ್‌ರಚನೆಗೆ ಹೈಕಮ್ಯಾಂಡ್ ಒಪ್ಪಿಗೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ. ಹೈಕಮ್ಯಾಂಡ್ ಪುನರ್‌ರಚನೆಗೆ ಸಮ್ಮತಿಸಿದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಡೆಯುವುದಿಲ್ಲ ಎಂಬುದು ಸ್ಪಷ್ಟವಾಗಲಿದೆ. ಇದರಿಂದ ಮುಂದಿನ ಎರಡೂವರೆ ವರ್ಷಗಳಿಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲೇ ಮುಂದುವರಿಯುವ ಸಾಧ್ಯತೆ ಬಲವಾಗಿದೆ. ಇದನ್ನೂ ಓದಿ: ಉರ್ದು ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಇನ್ನೊಂದೆಡೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಬಣವು ಯಾವುದೇ ಸಚಿವ ಸಂಪುಟ ಪುನರ್‌ರಚನೆಗೆ ವಿರೋಧ ವ್ಯಕ್ತಪಡಿಸಿದೆ. ಬದಲಾಗಿ ಸಿಎಂ ಸ್ಥಾನವನ್ನು ಸಿದ್ದರಾಮಯ್ಯರಿಂದ ತೆಗೆದು ಡಿಕೆಶಿಗೆ ನೀಡುವಂತೆ ಒತ್ತಾಯಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮ್ಯಾಂಡ್ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದರ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಹೆಚ್ಚು ಕುತೂಹಲ ಮೂಡಿದೆ.
