ಬೆಳಗಾವಿ: ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಬೇಕಾಗಿದೆ. ರಸಗೊಬ್ಬರ ಬಳಕೆಯಿಂದ ಹೆಚ್ವಿನ ಇಳುವರಿ ಬರುತ್ತದೆ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕಾಗಿದೆ. ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಪ್ರತಿಶತ 90 ಕೃಷಿ ಮೇಲೆಯೇ ಅವಲಂಬಿತವಾಗಿದೆ. ರೈತರಿಗೆ ಬೇಕಾದ ಸಹಾಯ ಮಾಡುವುದು ಸರಕಾರಗಳ ಜವಾಬ್ದಾರಿಯಾಗಿದೆ ಎಂದರು.
ನೀರಿನ ನಿರ್ವಹಣೆ ಕುರಿತು ಪ್ರತಿಯೊಬ್ಬರು ತಿಳಿದುಕೊಂಡು ನೀರನ್ನು ಮಿತವಾಗಿ ಬಳಸಬೇಕು. ಈ ಕುರಿತು ಕೃಷಿ ಇಲಾಖೆ ಪ್ರತಿ ರೈತರ ಹತ್ತಿರ ಹೋಗಿ ಇಲಾಖೆಯಿಂದ ಪರಿಚಯಿಸಲಾಗುವ ಹೊಸ ತಳಿಗಳ ಕುರಿತು ಮಾಹಿತಿ ನೀಡಬೇಕು. ಕಳೆದ ಆಯವ್ಯಯಲ್ಲಿ ಘೋಷಿಸಿದಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆಎಂದು ತಿಳಿಸಿದರು.
ರೈತರು ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರಕಾರವು ಸಬ್ಸಿಡಿ ಮೂಲಕ ಹೊಸ ಯಂತ್ರೋಪಕರಣಗಳನ್ನು ವಿತರಿಸುತ್ತಿದೆ.
ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ ಮಾಡಲಾಗುತ್ತಿದೆ. ಅಲ್ಲಿನ ರೈತರು ಕೃಷಿ ಇಲಾಖೆಯಿಂದ ಜಾರಿಯಲ್ಲಿರುವ ಸಾಕಷ್ಟು ಯೋಜನೆಗಳನ್ನು ಪಡೆದು ಅಭಿವೃದ್ಧಿಪರ ಕೃಷಿ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ ರೈತರಿಗೆ ಹೊಸ ಹೊಸ ತಂತ್ರಜ್ಞಾನ ಬಳಕೆ, ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು. ಕೃಷಿಯನ್ನು ಲಾಭದಾಯಕವ್ನಾಗಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸಲು ರಾಜ್ಯ ಸರಕಾರ ಸದಾ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಹೇಳಿದರು.
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, ರಾಜ್ಯದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಬೇಕು. ಬೆಳೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳುವುದರ ಮೂಲಕ ಉತ್ತಮ ಆದಾಯ ಪಡೆಯಬೇಕೆನ್ನುವ ಉದ್ದೇಶದಿಂದ ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆಶಿ
ರೈತರಿಗೆ ಅನುಕೂಲವಾಗುವ ಎಲ್ಲ ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಬೆಂಬಲಿಸುವ ಕಾರ್ಯ ಸಿದ್ಧರಾಮಯ್ಯನವರ ನೇತೃತ್ವದ ನಮ್ಮ ಸರಕಾರ ಮಾಡುತ್ತಿದೆ. ಕಡಿಮೆ ನೀರು, ಖರ್ಚಿನಲ್ಲಿ ಉತ್ತಮ ಇಳುವರಿ ತೆಗೆಯಬಹುದಾದ ತಳಿಗಳನ್ನು ಪರಿಚಯಿಸುವುದರ ಮೂಲಕ ರೈತರು ಉತ್ತಮ ಆದಾಯ ಪಡೆಯಬಹುದಾದ ಕಾರ್ಯಕ್ರಮ ರೂಪಿಸಲಾಗಿದೆ.
ಕಬ್ಬು ಕಟಾವು ಯಂತ್ರಗಳನ್ನು ಸಬ್ಸಿಡಿ ಮೂಲಕ ವಿತರಿಸುತ್ತಿರುವುದು ರಾಷ್ಟ್ರಕ್ಕೆ ಮಾದರಿಯಾಗಿದೆ. ಇಂತಹ ಯೋಜನೆಗಳ ಮೂಲಕ ಕೃಷಿ ಕಾರ್ಮಿಕರ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಆದಾಯ ಪಡೆಯಬಹುದಾಗಿದೆ ಎಂದು ಚಲುವರಾಯಸ್ವಾಮಿ ಹೇಳಿದರು.
