ಬೆಂಗಳೂರು: ಕೋಗಿಲು ಗ್ರಾಮದ ಬಳಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸೇರಿದ ಸರ್ಕಾರಿ ಜಾಗದಲ್ಲಿನ ಅನಧಿಕೃತ ನಿರ್ಮಾಣಗಳ ತೆರವು ಕಾರ್ಯಾಚರಣೆಯ ಪ್ರದೇಶವನ್ನು ಇಂದು ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರುಪರಿಶೀಲಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಜಾಗವನ್ನು ಸರ್ಕಾರವು ಸುಮಾರು 9-10 ವರ್ಷಗಳ ಹಿಂದೆಯೇ ಘನತ್ಯಾಜ್ಯ ವಿಲೇವಾರಿ ಘಟಕಕ್ಕಾಗಿ ಮಂಜೂರು ಮಾಡಿತ್ತು. ಆದರೆ, ಕೆಲವರು ಈ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿ ಗುಡಿಸಲುಗಳನ್ನು ನಿರ್ಮಿಸಿದ್ದರು, ಹಲವಾರು ಬಾರಿ ಸಹ ನೋಟಿಸ್ ನೀಡಲಾಗಿತ್ತು. ನಂತರ ನಮ್ಮ ಅಧಿಕಾರಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದರು. ಈ ವಿಷಯ ಈಗಾಗಲೇ ಸ್ಥಳೀಯ ಶಾಸಕರ ಗಮನದಲ್ಲಿದ್ದು, ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದರು.
ದುರದೃಷ್ಟವಶಾತ್, ಈ ವಿಚಾರದಲ್ಲಿ ಕೆಲವರು ಅನಗತ್ಯವಾಗಿ ರಾಜಕೀಯ ಬೆರೆಸುತ್ತಿದ್ದಾರೆ. ಕೇರಳದ ಮುಖ್ಯಮಂತ್ರಿಗಳು ಸೇರಿದಂತೆ ಕಮ್ಯುನಿಸ್ಟ್ ಪಕ್ಷದ ನಾಯಕರು ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಅಲ್ಪಸಂಖ್ಯಾತರ ಓಲೈಕೆಗಾಗಿ ಸುಳ್ಳು ಸಹಾನುಭೂತಿ ತೋರುತ್ತಿದ್ದಾರೆ. ಇದನ್ನೂ ಓದಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ; ಸಿಎಂ
ಇನ್ನು ಕೆಲವು ವ್ಯಕ್ತಿಗಳು ಬಡವರಿಂದ ಹಣ ಪಡೆದು ಸರ್ಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ್ದಾರೆ. ಅರ್ಹ ಫಲಾನುಭವಿಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳು ಈಗಾಗಲೇ ಸಭೆ ಕರೆದಿದ್ದು, ಅಲ್ಲಿ ಈ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗುವುದು. ಅರ್ಹ ಬಡವರಿಗೆ ಯಾವುದೇ ಅನ್ಯಾಯವಾಗದಂತೆ ನಾವು ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ, ಸರ್ಕಾರಿ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ ಅಥವಾ ನೀಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ನಿಶ್ಚಿತ ಎಂದು ತಿಳಿಸಿದರು.
