ಬೆಂಗಳೂರು: ಸಚಿವ ಸಂಪುಟದಲ್ಲಿ ಮೂರು ಮುಖ್ಯ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ವಿಧಾನ ಸಭೆ ಹಾಗೂ ವಿಧಾನ ಅಧಿವೇಶನವನ್ನು 22-1- 2026 ರಂದು ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಅವರು ಹೇಳಿದರು.
ಇಂದು ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 22-1-2026 ವಿಧಾನ ಮಂಡಲದ ಅಧಿವೇಶನದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲರನ್ನು ಆಹ್ವಾನಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ರಾಜ್ಯಪಾಲರು ಮಾಡಲಿರುವ ಭಾಷಣವನ್ನು ಅನುಮೋದಿಸಲು ಸಚಿವ ಸಂಪುಟವು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಿದೆ.
ವಿಬಿಜಿ ರಾಮ್ ಜಿ ಕಾಯ್ದೆಯ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವಿಶೇಷ ಚರ್ಚೆ ಮಾಡಲಾಗಿದೆ.
ನೂತನ ಕಾಯ್ದೆಯು ಸಮಾಜದ ಮೇಲೆ ಬೀರಿರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸಲು ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ ನೂತನ ಕಾಯ್ದೆಯ ಕುರಿತು ನಿರ್ಣಯ ಕೈಗೊಳ್ಳಲು ಸಚಿವ ಸಂಪುಟ ನಿರ್ಣಯಿಸಿದೆ.
ಜಂಟಿ ಸದನ 22 ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಕರೆಯಲು ತೀರ್ಮಾನಿಸಿದೆ. 22 ರಿಂದ 31 ರವರಿಗೆ ಜಂಟಿ ಅಧಿವೇಶನ ನಡೆಯಲಿದೆ ಎಂದು ಹೇಳಿದರು.
ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆ
ಜನಹಿತ, ರಾಜ್ಯದ ಹಿತ ಕಾಪಾಡಲು ಸೂಕ್ತವಾದ ಹೆಜ್ಜೆಯನ್ನು ಸರ್ಕಾರ ಇಡಲಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ನಮ್ಮ ರಾಜ್ಯದ ಜನರ ಹಕ್ಕನ್ನು ಕಿತ್ತುಕೊಳ್ಳಲು ಮುಂದಾದರೆ ಸರ್ಕಾರ ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.
ಸರ್ಕಾರ ಅಧಿವೇಶನ ಕರೆಯದೇ ಬಿಡಲು ಸಾಧ್ಯವಿಲ್ಲ. ಅರಿವು ಹಾಗೂ ಜಾಗೃತಿ ಮೂಡಿಸಲು ಹಾಗೂ ಕೇಂದ್ರ ಸರ್ಕಾರದ ಮೇಲೆ MNREGA ಕಾಯ್ದೆಯ ಮರುಸ್ಥಾಪನೆಗಾಗಿ ಒತ್ತಡ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.
