ಮೈಸೂರು: ಅಷ್ಟು ದಿನ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಯಾವುದೇ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಅವಕಾಶ ಕೊಡದೆ ಬೇಕಾಬಿಟ್ಟಿ ಆಡಳಿತ ನಡೆಸಿದ್ದಾರೆ. ಈಗ ನಮ್ಮನ್ನು ಅವರು ಪ್ರಶ್ನೆ ಮಾಡಲು ಯಾವುದೇ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಇಂದು (ಭಾನುವಾರ ಜ. 18) ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಇದನ್ನೂ ಓದಿ: ಶಿಕ್ಷಣದಿಂದ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯ: ಸಿಎಂ
ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವಿರೋಧಪಕ್ಷದಲ್ಲಿರುವಾಗ ಯಾವ ಆಂದೋಲನ, ಪ್ರತಿಭಟನೆಗಳನ್ನು ಮಾಡುತ್ತಾರೆ ಎನ್ನುವುದು ಅವರ ಪಕ್ಷಕ್ಕೆ ಸೇರಿದ ವಿಚಾರ. ಅದಕ್ಕೆ ನಾವು ಉತ್ತರ ಕೊಡುತ್ತೇವೆ ಎಂದರು.
ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ
ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದೂ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದಾಗ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ವರದಿ ಕೊಟ್ಟಿದ್ದಾರೆ ಎಂದರು.
ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ
ಲೋಕಸಭಾ ಚುನಾವಣೆಗೆ ಪ್ರಚಾರಕ್ಕೆ ಬಂದಾಗ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು ಎಂದರು.
ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದರು.
ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ ಕಾಂಗ್ರೆಸ್ ರಿಪಬ್ಲಿಕ್ ಆಫ್ ಕರ್ನಾಟಕ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕಾಂಗ್ರೆಸ್ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ ? ಎಂದು ಸಿಎಂ ಪ್ರಶ್ನಿಸಿದರು.
