ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಮೂಡಿ ಬರುತ್ತಿರುವ ಚಿತ್ರಗಳು ಸಮಾಜಕ್ಕೆ ಒಂದು ಸಂದೇಶವನ್ನು ನೀಡುವ ಕಥಾಂದರವನ್ನು ಹೊತ್ತು ಬರುತ್ತಿವೆ. ಅದಕ್ಕೆ ದೊಡ್ಡ ಉದಾಹರಣೆ ಎಂಬಂತೆ ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟಿಸಿರುವ “ಲ್ಯಾಂಡ್ ಲಾರ್ಡ್” ಸಿನಿಮಾ ಎಲ್ಲರ ಮನ ಗೆಲ್ಲುತ್ತಿದೆ.
ಹೌದು, “ಲ್ಯಾಂಡ್ ಲಾರ್ಡ್” ಸಿನಿಮಾ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಇದೀಗ ರಾಜ್ಯ ಸರ್ಕಾರದಿಂದ “ಲ್ಯಾಂಡ್ ಲಾರ್ಡ್” ಚಿತ್ರತಂಡಕ್ಕೆ ಭರ್ಜರಿಸಿ ಸಿಹಿ ಸುದ್ದಿ ಸಿಕ್ಕಿದೆ.
ಇತ್ತೀಚೆಗೆ ನಟ ದುನಿಯಾ ವಿಜಯ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ತಮ್ಮ ಮುಂಬರುವ ಚಿತ್ರದ ಕುರಿತು ಮಾತುಕತೆ ನಡೆಸಿದ್ದರು. ಈ ವೇಳೆ ‘ಲ್ಯಾಂಡ್ ಲಾರ್ಡ್’ ಚಿತ್ರದ ಕಥಾಹಂದರ, ಉದ್ದೇಶ ಮತ್ತು ಸಮಾಜಕ್ಕೆ ನೀಡುವ ಸಂದೇಶವನ್ನು ಅವರು ವಿವರವಾಗಿ ಸಿಎಂ ಗಮನಕ್ಕೆ ತಂದಿದ್ದರು.
ಚಿತ್ರವು ಕೇವಲ ಮನರಂಜನೆಗೆ ಸೀಮಿತವಾಗದೇ, ಗ್ರಾಮೀಣ ಭಾಗದಲ್ಲಿ ಬೇರೂರಿರುವ ಫ್ಯೂಡಲ್ ವ್ಯವಸ್ಥೆ, ಜಾತಿ ಪದ್ಧತಿಯ ಕರಾಳ ಮುಖ ಹಾಗೂ ಶೋಷಿತ ವರ್ಗಗಳ ಪರ ಧ್ವನಿ ಎತ್ತುವ ಪ್ರಯತ್ನವನ್ನು ಒಳಗೊಂಡಿದೆ ಎಂದು ದುನಿಯಾ ವಿಜಯ್ ವಿವರಿಸಿದರು.
ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿತ್ರದ ಆಶಯಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇನ್ನು ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಡಿಜಿಟಲ್ ಶಿಕ್ಷಣದ ಭಾಗ್ಯ
ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ. ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ.
ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ ಎಂದಿದ್ದಾರೆ.
