ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಕಾದಾಟದ ಕಾವು ಜೋರಾಗಿದ್ದು ಇದೀಗ ಸಿಎಂ ಕುರ್ಚಿ ಬದಲಾವಣೆ ಕುರಿತು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಅಚ್ಚರಿ ಹೇಳಿಕೆಯನ್ನು ಹೇಳಿದ್ದಾರೆ.
ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲಎಂದು ಹೇಳಿದ್ದಾರೆ.
ಈ ಕುರಿತು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್ಲದಿದ್ದಾಗ ಶಸ್ತ್ರತ್ಯಾಗದ ಪ್ರಶ್ನೆಯೇ ಬಾರದು ಎಂದು ಕೇಳಿದರು.
ತಾಳ್ಮೆಯ ಅಸ್ತ್ರ ಇದೆ ಎಂದಿದ್ದೀರಿ ಎಂದಾಗ, “ಈಗಲೂ ತಾಳ್ಮೆ ಇರಲಿ ಎಂದು ಹೇಳುತ್ತಿದ್ದೇನೆ” ಎಂದರು.
ಶಸ್ತ್ರ, ತಂತ್ರ, ಯುದ್ಧ ಇಲ್ಲದೇ ಬಗೆಹರಿಯುವುದೇ ಎಂದಾಗ, “ಇದು ರಾಜಕಾರಣ. ಇಲ್ಲಿ ಶಸ್ತ್ರ ಹಾಗೂ ಅಸ್ತ್ರ ಬೇಕಾಗಿಲ್ಲ” ಎಂದರು.
ಶಾಸಕರ ದೆಹಲಿ ಯಾತ್ರೆ ವಿಚಾರ ನನಗೆ ಗೊತ್ತಿಲ್ಲ
ಶಾಸಕರು ದೆಹಲಿಗೆ ತೆರಳಿ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಕೇಳುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಶಾಸಕರನ್ನೇ ಕೇಳಿ ಎಂದರು. ಇದನ್ನೂ ಓದಿ: ಯಾವುದೇ ಕಷ್ಟ ಬಂದರೂ 5 ವರ್ಷ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಬೇಕು: ಡಿಕೆ ಸುರೇಶ್
ಭೋಜನಕೂಟ ಸೇರಿದ ಶಾಸಕರು ನಾಯಕತ್ವದ ವಿಚಾರದಲ್ಲಿ ಸ್ಪಷ್ಟನೆ ಕೇಳಿದ್ದಾಗ ನಾನು ಊರಲ್ಲಿ ಇರಲಿಲ್ಲ. ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ, ಯಾವ ಹೇಳಿಕೆ ಕೊಟ್ಟಿದ್ದಾರೆ ಎಂಬುದೂ ಗೊತ್ತಿಲ್ಲ. ಇದು ಅವರ ವೈಯಕ್ತಿಕ ವಿಚಾರ. ಪಕ್ಷ ಅದನ್ನು ಗಮನಿಸಲಿದೆ ಎಂದು ತಿಳಿಸಿದರು.
