ಬೆಂಗಳೂರು: ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ ಬೆಂಗಳೂರು: ಅನಿಲ ಪೂರೈಕೆ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಕೇಂದ್ರ ಸರ್ಕಾರ ಸರಿಯಾಗಿ ಮುಂಜಾಗ್ರತೆ, ನೀತಿ ರೂಪಿಸಬೇಕಿತ್ತು. ಈ ವಿಚಾರದಲ್ಲಿ ವಿಫಲವಾಗಿದೆ. ಈ ವಿಚಾರವಾಗಿ ಬಿಜೆಪಿಯವರು ಈವರೆಗೂ ಯಾಕೆ ಮಾತನಾಡುತ್ತಿಲ್ಲ. ನಮ್ಮಿಂದ ತೊಂದರೆಯಾಗಿದೆ ಎಂದು ಒಪ್ಪಿಕೊಂಡು ಜನರ ಬಳಿ ಕ್ಷಮೆ ಕೋರಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದಲ್ಲಿ ಇಂದು (ಶನಿವಾರ ಏಪ್ರಿಲ್ 04) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಂದ ಮತಕ್ಕಿಂತ ಈ ಬಾರಿಯ ಉಪಚುನಾವಣೆಯಲ್ಲಿ ಹೆಚ್ಚು ಮತ ಬೀಳಲಿದ್ದು, ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆ ಪ್ರಚಾರ ಮಾಡಿ ಬಂದಿದ್ದೇನೆ. ನಮ್ಮ ಕಾರ್ಯಕರ್ತರು ಬಹಳ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ಹೋಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ. ಗ್ಯಾರಂಟಿ ಫಲಾನುಭವಿಗಳಲ್ಲಿ ಕಳೆದ ಬಾರಿ ಬಿಜೆಪಿಗೆ ಮತ ಹಾಕಿರುವವರೂ ಕೂಡ ಈ ಬಾರಿ ಕಾಂಗ್ರೆಸ್ ಗೆ ಮತ ಹಾಕುವುದಾಗಿ ತಿಳಿಸಿದ್ದಾರೆ. ಬೇಲೆ ಏರಿಕೆಯಾಗುತ್ತಿರುವ ಪರಿಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆ ಎಷ್ಟು ನೆರವಾಗುತ್ತಿವೆ ಎಂದು ಸ್ಮರಿಸುತ್ತಿದ್ದಾರೆ. ಇವುಗಳನ್ನು ಉಳಿಸಿಕೊಳ್ಳಲು ಜನ ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ: ಸಿಎಂ
ಇನ್ನು ಕೇರಳ ಚುನಾವಣೆ ಪ್ರಚಾರಕ್ಕೆ ಎರಡು ದಿನ ಪ್ರವಾಸ ಮಾಡಬೇಕಾಗಿದ್ದು, ಅಲ್ಲಿ ಪ್ರವಾಸ ಮಾಡಿ ಬಂದ ಬಳಿಕ, ಇಲ್ಲಿ ದಾವಣಗೆರೆ ಅಥವಾ ಬಾಗಲಕೋಟೆಗೆ ತೆರಳುತ್ತೇನೆ ಎಂದು ತಿಳಿಸಿದರು.
ಬಿಜೆಪಿಗರು ತಪ್ಪೊಪ್ಪಿಕೊಂಡು ಜನರ ಕ್ಷಮೆ ಕೇಳಲಿ
ರಾಜ್ಯದಲ್ಲಿ ಗ್ಯಾಸ್ ಅಭಾವದ ಸಮಸ್ಯೆ ಹೆಚ್ಚಾಗುತ್ತಿದೆ ಆಟೋ ಚಾಲಕರಿಗೆ ಇದರಿಂದ ಬಹಳ ತೊಂದರೆಯಾಗುತ್ತಿದೆ. ಇದರಿಂದ ಸಂಚಾರ ವ್ಯವಸ್ಥೆಗೆ ಪರಿಣಾಮ ಬೀರುತ್ತಿದೆ. ಜತೆಗೆ ಹೊಟೇಲ್ ಕ್ಷೇತ್ರವು ಸಮಸ್ಯೆ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
