ಗುಡಿಬಂಡೆ: ತಿರುಮಣಿ ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿಗಳ ಬಿಲ್ ಪಾವತಿಗೆ ಲಂಚ ಪಡೆಯುತ್ತಿದ್ದ ಆರೋಪ ಎದುರಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಶ್ರೀನಿವಾಸಮೂರ್ತಿ.ಕೆ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕರ್ತವ್ಯ ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ, ಉದಾಸೀನತೆ, ಬೇಜವಾಬ್ದಾರಿತನ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ನಡೆದುಕೊಂಡಿರುವುದು ಪ್ರಮುಖ ಕಾರಣಗಳಾಗಿವೆ. ಲಂಚ ಪಡೆಯುತ್ತಿದ್ದ ವೀಡಿಯೋ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಅಪೀಲು) ನಿಯಮಗಳು 1957ರ ನಿಯಮ 10(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಈ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಪಿಡಿಓ ಲಂಚಾವತಾರ ಬಟಾ ಬಯಲು!
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ನವೀನ್ ಭಟ್ ಅವರು ಈ ಅಮಾನತು ಆದೇಶಕ್ಕೆ ಸಹಿ ಹಾಕಿದ್ದಾರೆ.
