ಶಿರಸಿ: ಶೈಕ್ಷಣಿಕ ಜಿಲ್ಲೆ ಶಿರಸಿಯ ಶ್ರೀ ಮಾರಿಕಾಂಬ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 2026ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಪಡೆದ ಶಿರಸಿ-ಸಿದ್ದಾಪುರ ತಾಲೂಕಿನ ಸಾಧಕ ವಿದ್ಯಾರ್ಥಿಗಳಿಗೆ ಇಂದು (ಬುಧವಾರ ಏ.29) ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ನಂತರ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಗುಣಮಟ್ಟದ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಇಂತಹ ಸಾಧನೆಗಳು ಸುಳ್ಳು ಮಾಡುತ್ತವೆ. ಪ್ರತಿಭೆಗಳನ್ನು ಗುರುತಿಸಿ ಅಭಿನಂದಿಸುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಶೈಕ್ಷಣಿಕ ಜಿಲ್ಲೆಯ ಪ್ರಗತಿಗೆ ಸಾಕ್ಷಿಯಾಗಿದೆ. ಜೊತೆಗೆ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಅವರಿಗೆ ಬೆನ್ನೆಲುಬಾಗಿ ನಿಂತ ಶಿಕ್ಷಕ ವೃಂದಕ್ಕೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಇದನ್ನೂ ಓದಿ: ದೈವ ಸೇವೆಗೆ ನಂದಿನಿ ತುಪ್ಪ ಪೂರೈಕೆ: ಡಿಕೆ ಸುರೇಶ್
ಈ ಸಂದರ್ಭದಲ್ಲಿ ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಪೋಷಕರು ಹಾಗೂ ಮುದ್ದು ಮಕ್ಕಳು ಹಾಜರಿದ್ದರು.
