ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಇಂದು (ಮಂಗಳವಾರ ಮೇ 12) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀಟ್ ಎನ್ನುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನೀಟ್ನಲ್ಲಿ ಒಂದಲ್ಲ ಒಂದು ಗೊಂದಲಗಳು, ಅಕ್ರಮಗಳು ನಡೆಯುತ್ತಲೇ ಇವೆ. ಇದಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದರಿಂದ ಮತ್ತೊಮ್ಮೆ ಬಹುದೊಡ್ಡ ಅಚಾತುರ್ಯವಾಗಿದೆ ಎಂದು ಡಾ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರವೇ ಇದರ ಸಂಪೂರ್ಣ ಹೊಣೆ ಹೊರಬೇಕಾಗಿದೆ. ತಪ್ಪಿತಸ್ಥರನ್ನು ಕಾನೂನಿನ ಕಟಕಟೆಗೆ ತಂದು ನಿಲ್ಲಿಸಬೇಕಾಗಿದೆ. ಇದು ಕೇಂದ್ರ ಸರ್ಕಾರ ಅಮರ್ಥತತೆಗೆ ಸಾಕ್ಷಿಯಾಗಿದೆ. ಇದರಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮೀಸಲಾತಿ ಹೆಚ್ಚಳ ವಿಚಾರ: ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವ ಭರವಸೆ ನೀಡಿದ ಸಿಎಂ
ಈಗ ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾದಂತಾಗುತ್ತದೆ. ವಿದ್ಯಾರ್ಥಿಗಳು, ಕುಟುಂಬದವರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ. ಮಾನಸಿಕ ಒತ್ತಡವೂ ಹೆಚ್ಚಾಗಲಿದೆ ಎಂದು ಡಾ. ಪಾಟೀಲ್ ವಿವರಿಸಿದ್ದಾರೆ.
ಪ್ರತಿ ವರ್ಷ ಆಗುತ್ತಿರುವ ಪ್ರಮಾದವನ್ನು ಸರಿ ಮಾಡಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ ಇದು ನಿಜಕ್ಕೂ ಅಸಮರ್ಥ ಸರ್ಕಾರವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ ಎಂದೇ ಅರ್ಥ. ಕೇಂದ್ರ ಬಿಜೆಪಿ ಭ್ರಷ್ಟ ಸರ್ಕಾರವಾಗಿದೆ. ಎಂದಿದ್ದಾರೆ.
