ಬೆಂಗಳೂರು: ಕಾಂಗ್ರೆಸ್ ನಾಯಕರು ದೇಶದಲ್ಲಿ ಬಿಜೆಪಿ ಪಕ್ಷ ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪವನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿಯವರು ತಕ್ಷಣ ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರದಲ್ಲಿ ಇಂದು (ಗುರುವಾರ 21) ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ರಾಷ್ಟ್ರೀಯ ಮಟ್ಟದ ನಾಯಕರು ಈ ರೀತಿಯ ಬಾಲಿಶ ಹೇಳಿಕೆಗಳನ್ನು ನೀಡಬಾರದು ಎಂದು ಟೀಕಿಸಿದರು.
ಎಲುಬಿಲ್ಲದ ನಾಲಿಗೆ ಏನನ್ನಾದರೂ ಮಾತನಾಡಬಾರದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಮಾನಕರವಾಗಿ ಮಾತನಾಡುವುದು ಸರಿಯಲ್ಲ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾವೇರಿ ತಟದಲ್ಲಿರುವ ದೇವಸ್ಥಾನಕ್ಕೆ ಭಕ್ತಿಯ ಪರಂಪರೆಯಿದೆ: ಡಿಕೆಶಿ
ಹಿಂದುಳಿದ ವರ್ಗದ ಸಮಾಜದಿಂದ ಬಂದಿರುವ ನರೇಂದ್ರ ಮೋದಿ ಅವರು 3ನೇ ಬಾರಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ದೇಶವನ್ನು ಜಾಗತಿಕ ಮಟ್ಟದಲ್ಲಿ 4ನೇ ಆರ್ಥಿಕ ಶಕ್ತಿಯನ್ನಾಗಿ ರೂಪಿಸಿದ್ದಾರೆ. ದೇಶದ ಅಭಿವೃದ್ಧಿಯನ್ನು ಸಹಿಸದೇ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.
