ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ನಾಗರಿಕರ ಅನುಕೂಲಕ್ಕಾಗಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳ ಮಾಹಿತಿಯನ್ನು ಸುಲಭವಾಗಿ ಲಭ್ಯವಾಗುವಂತೆ ಒದಗಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳುವ ಕುರಿತು ಇಂದು ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ಲಸಿಕಾ ಬೂತ್ಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ದೊರೆಯುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜೂನ್ 28ರಿಂದ ಜುಲೈ 1ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಎಲ್ಲ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ, ಶೇ.100 ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ಸಂಬಂಧ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕು. ಜೊತೆಗೆ ಅಪಾರ್ಟ್ಮೆಂಟ್ ಅಸೋಸಿಯೇಷನ್ಗಳೊಂದಿಗೆ ಸಮನ್ವಯ ಸಾಧಿಸಿ, ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ದೇಶದ ಜನರ ಕ್ಷಮೆ ಕೇಳಬೇಕು: ಬೊಮ್ಮಾಯಿ
ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ವೆಂಕಟಾಚಲಪತಿ ಮಾತನಾಡಿ, ನಗರದಾದ್ಯಂತ ಪಲ್ಸ್ ಪೋಲಿಯೋ ಕುರಿತು ನಾಗರಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸ ಕೈಗೊಳ್ಳಬೇಕು ಎಂದು ಹೇಳಿದರು. ನರ್ಸಿಂಗ್ ಕಾಲೇಜುಗಳು, ವೈದ್ಯಕೀಯ ಕಾಲೇಜುಗಳು ಹಾಗೂ ಪ್ಯಾರಾ ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳನ್ನು ಸ್ವಯಂಸೇವಕರಾಗಿ ಬಳಸಿಕೊಂಡು, ಎಲ್ಲ ಅರ್ಹ ಮಕ್ಕಳಿಗೂ ಪೋಲಿಯೋ ಹನಿ ತಲುಪುವಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
