ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಎಂಬ ಖಾತೆಯ ಮೂಲಕ ಇನ್ಸ್ಟಾಗ್ರಾಮ್ ನಲ್ಲಿ ಕ್ಷಣ ಕ್ಷಣಕ್ಕೂ ಮಿಲಿಯನ್ ಗಟ್ಟಲೆ ಫಾಲೋವರ್ಸ್ ಪಡೆಯುತ್ತಿದ್ದು, ಕಾಕ್ರೋಚ್ ಜನತಾ ಪಕ್ಷವು ಮೇ 24ರಂದು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹರಿದಾಡುತ್ತಿದ್ದು, ಇದಕ್ಕೆ ಬೆಂಗಳೂರು ಪೊಲೀಸರು ಬ್ರೇಕ್ ಹಾಕಿದ್ದಾರೆ.
ಹೌದು, ಟೌನ್ ಹಾಲ್ ಬಳಿ ಯಾವುದೇ ಕಾರ್ಯಕ್ರಮಗಳು ಹಾಗೂ ಇನ್ನಿತರ ಪ್ರತಿಭಟನೆ, ಧರಣಿ ಸಾರ್ವಜನಿಕ ಸಮಾವೇಶಗಳಿಗೆ ಅನುಮತಿ ನೀಡುವುದಿಲ್ಲ. ಪ್ರತಿಭಟನೆ ಮಾಡುವುದಾದರೆ ಅದು ಕೇವಲ ಫ್ರೀಡಂ ಪಾರ್ಕ್ ನಲ್ಲಿ ಎಂದು ಸ್ಪಷ್ಟಪಡಿಸಿದ್ದಾರೆ.
ಮಾನವ ಸರಪಳಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳು ವೈರಲ್ ಆಗುತ್ತಿರುವುದನ್ನು ಗಮನಿಸಿರುವ ಪೊಲೀಸ್ ಇಲಾಖೆ, ಈವರೆಗೆ ಯಾವುದೇ ಅಧಿಕೃತ ಮನವಿ ಬಂದಿಲ್ಲ ಎಂದು ಹೇಳಿದೆ. ಒಂದು ವೇಳೆ ಅರ್ಜಿ ಬಂದರೂ ಟೌನ್ ಹಾಲ್ ಬಳಿ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆಗೆ ಸಿದ್ಧತೆ
ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್ಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು ಎಂದು ಕೂಡ ಎಚ್ಚರಿಕೆ ನೀಡಲಾಗಿದೆ. ಕಾಕ್ರೋಚ್ ಜನತಾ ಪಾರ್ಟಿಯ ಹೆಸರಿನಲ್ಲಿ ಮೇ 24ರಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಶಾಂತಿಯುತ ಮಾನವ ಸರಪಳಿ ನಿರ್ಮಿಸಲು ಕರೆ ನೀಡಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
