ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾಸಂಕೀರ್ಣ ನಿರ್ಮಾಣದ ಮೂಲಕ ನಮ್ಮ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನ ಸೂರ್ಯನಗರದ ಕೆ.ಹೆಚ್.ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ನಿವೇಶನ ಹಂಚಿಕೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು.
ನಮ್ಮ ಹಳ್ಳಿಯಲ್ಲಿ ಒಂದು ಮಾತಿದೆ. ನೇಗಿಲಿನಲ್ಲಿ ಉಳುಮೆ ಮಾಡದೇ ಯಾವ ಭೂಮಿಯು ಫಲ ನೀಡುವುದಿಲ್ಲ, ಅದೇ ರೀತಿ ಡಿ.ಕೆ. ಸುರೇಶ್ ಹಾಗೂ ಶಾಸಕರಾದ ಶಿವಣ್ಣ ಅವರು ಈ ಭಾಗದ ಜನರ ಋಣ ತೀರಿಸಲು ಈ ಐತಿಹಾಸಿಕ ಕಾರ್ಯಕ್ರಮದ ಕನಸು ಕಂಡು, ಸಂಕಲ್ಪ ಮಾಡಿದ್ದರು. ಅದಕ್ಕೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಶಿಲಾನ್ಯಾಸ ಮಾಡಿದೆ. ‘ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ’ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಶಿಕ್ಷಣ ಸಚಿವ
ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಯಾರು ಜಮೀನು ಕಳೆದುಕೊಂಡಿದ್ದಾರೆ, ಅವರಿಗೂ ಒಳ್ಳೆಯದಾಗಬೇಕು, ಕ್ರೀಡಾಪಟುಗಳಿಗೂ ಉತ್ತಮ ಅನುಕೂಲ ಮಾಡಿಕೊಡಬೇಕು, ಈ ಭಾಗದ ಅಭಿವೃದ್ಧಿ ಮಾಡಲು ನಮ್ಮ ಸರ್ಕಾರ ಈ ತೀರ್ಮಾನ ಮಾಡಬೇಕು. ನಾಳೆಯ ಬಗ್ಗೆ ನಮಗೆ ಗೊತ್ತಿಲ್ಲ, ನಿನ್ನೆ ಬಗ್ಗೆ ಚರ್ಚೆ ಮಾಡಿ ಪ್ರಯೋಜನವಿಲ್ಲ. ನಮ್ಮ ಕೈಯಲ್ಲಿರುವ ಇಂದಿನ ದಿನವನ್ನು ನಾವು ಯಾವ ರೀತಿ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಹೀಗಾಗಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆ ಮಾಡಿ, ಹೊಸ ರೂಪ ನೀಡಲು ತೀರ್ಮಾನಿಸಿದೆ ಎಂದು ವಿವರಿಸಿದರು.
