ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹಲವು ದಿನಗಳಿಂದ ಚರ್ಚೆಗೆ ಕಾರಣವಾಗಿದ್ದ ಸಿಎಂ ಬದಲಾವಣೆ ಕೂಗಿಗೆ ಇದೀಗ ತೆರೆ ಬಿದ್ದಿದೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಸ್ಥಾನಕ್ಕೆ ಇಂದು (ಗುರುವಾರ ಮೇ 28) ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇದರಿಂದ ಹಲವು ದಿನಗಳಿಂದ ಕುರ್ಚಿ ಕದನದಲ್ಲಿದ್ದ ರಾಜ್ಯ ಕಾಂಗ್ರೆಸ್ ಪಡಸಾಲಿಯಲ್ಲಿ ಸಿಎಂ ಕುರ್ಚಿ ಕದನಕ್ಕೆ ಇಂದು ಅಂತಿಮ ಘಟ್ಟ ತಲುಪಿದ್ದು, ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅಲ್ಲದೆ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಅನುಪಸ್ಥಿತಿಯಲ್ಲಿರುವ ಕಾರ್ಯದರ್ಶಿಯವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ ತೆರಳಿದರು.
ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು.
ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದಾರೆ.
