ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆ ದೊರೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ವಿಶೇಷ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿರಾಜುದ್ದೀನ್ ಮದನಿ ಸೂಚಿಸಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕರೆಯಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಕುರಿತು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಕಂಡುಬರುವ ಜಂತುಹುಳು ಸೋಂಕು ನಿವಾರಣೆಗೆ ಜಂತುಹುಳುವಿನ ಜಗಿಯುವ ಮಾತ್ರೆ ನೀಡುವುದು ಸರಳ ಹಾಗೂ ಪರಿಣಾಮಕಾರಿ ಚಿಕಿತ್ಸೆಯ ವಿಧಾನವಾಗಿದೆ ಎಂದರು.
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ವರ್ಷದಲ್ಲಿ ಎರಡು ಬಾರಿ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮಾತ್ರೆಗಳನ್ನು ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಗುತ್ತದೆ. ಶಾಲೆಗೆ ದಾಖಲಾಗದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಕೂಡ ಮಾತ್ರೆ ದೊರೆಯುವಂತೆ ಅಂಗನವಾಡಿ ಕಾರ್ಯಕರ್ತೆಯರು ಕ್ರಮ ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು. ಪ್ರತಿ ಶಾಲೆಯಲ್ಲಿ ಶಿಕ್ಷಕರೊಬ್ಬರನ್ನು ನೋಡಲ್ ಅಧಿಕಾರಿಯನಾಗಿ ನೇಮಿಸಿ ಕಾರ್ಯಕ್ರಮದ ಮೇಲ್ವಿಚಾರಣೆ ನಡೆಸಬೇಕು ಎಂದು ಸೂಚಿಸಿದರು.
ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು, ಕೈತೊಳೆಯುವ ಅಭ್ಯಾಸದ ಕುರಿತು ಅರಿವು ಮೂಡಿಸಬೇಕು ಹಾಗೂ ಸ್ವಚ್ಛತಾ ಕ್ರಮಗಳ ಬಗ್ಗೆ ಮಕ್ಕಳಿಗೆ ತಿಳುವಳಿಕೆಯನ್ನು ನೀಡಬೇಕು ಎಂದರು.
ಶಾಲೆಗಳಲ್ಲಿ ಮಕ್ಕಳಿಗೆ ಜಂತುಹುಳ ನಿವಾರಣೆಗಾಗಿ ನೀಡುವ ಮಾತ್ರೆಗಳನ್ನು ಮಕ್ಕಳು ಸೇವಿಸಿದ ಬಳಿಕ ಯಾವುದೇ ಮಗುವಿಗೆ ಅಸ್ವಸ್ಥತೆ ಅಥವಾ ತೊಂದರೆ ಕಂಡುಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಅಗತ್ಯ ಚಿಕಿತ್ಸೆಯನ್ನು ಕೊಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು..
ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲೆಯ ಆಸ್ಪತ್ರೆಗಳಾದ ಸರ್.ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಕೆ.ಸಿ ಜನರಲ್ ಆಸ್ಪತ್ರೆ, ಯಲಹಂಕ ಸಾರ್ವಜನಿಕ ಆಸ್ಪತ್ರೆ , ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಆಸ್ಪತ್ರೆಗಳಿಗೆ ಕ್ವಾಲಿಟಿ ಅಶ್ಯೂರೆನ್ಸ್ (Quality Assurance) ಕಾರ್ಯಕ್ರಮದಡಿ ರಾಷ್ಟ್ರೀಯ ಗುಣಮಟ್ಟದ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ನದೀಮ್ ಅಹಮದ್, ಜಿಲ್ಲಾ ಗುಣಮಟ್ಟ ಸಲಹೆಗಾರ ಡಾ. ಪ್ರವೀಣ್ ಕುಮಾರ್ ಹುಲ್ಲೂರು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವಸಂತಿ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ (RCHO) ಡಾ. ಪ್ರಭಾವತಿ, ಜಿಲ್ಲಾ ವೈದ್ಯಕೀಯ ಅಧಿಕಾರಿ.(DMO) ಡಾ. ಪ್ರಿಯಾ, ಕೆ.ಸಿ.ಜಿ. ಆಸ್ಪತ್ರೆಯ ತಜ್ಞ ವೈದ್ಯೆ ಡಾ. ರಾಧಾ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
