ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೇಂದ್ರದಲ್ಲಿ ಸೇರಿದಂತೆ ರಾಜ್ಯದಲ್ಲೂ ಕೂಡ ಪ್ರಶ್ನೆ ಪತ್ರಿಕೆಗಳ ಸೋರಿಕೆ ಅಕ್ರಮಗಳು ಹೆಚ್ಚಾಗಿ ಕಂಡು ಬರುತ್ತಿರುವುದನ್ನ ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರ ಇದೀಗ ಮಹತ್ವದ ಹೆಜ್ಜೆಯನ್ನ ಇಡಲು ತಯಾರಿ ನಡೆಸುತ್ತಿದೆ.
ಪರೀಕ್ಷೆ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವುದು ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಸಂಪುಟದ ಉಪಸಮಿತಿಯನ್ನು ರಚಿಸಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವುದು, ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವುದು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ರೂಪಿಸುವುದು ಸಮಿತಿಯ ಪ್ರಮುಖ ಜವಾಬ್ದಾರಿಯಾಗಿದೆ.
ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಮಿತಿಯ ಸದಸ್ಯರಾಗಿದ್ದಾರೆ.
ಪರೀಕ್ಷೆ ಮತ್ತು ನೇಮಕಾತಿಗಳಿಗೆ ನಿಗದಿತ ವೇಳಾಪಟ್ಟಿ ರೂಪಿಸುವುದು, ಪ್ರಕ್ರಿಯೆಯಲ್ಲಿನ ಲೋಪಗಳನ್ನು ಗುರುತಿಸಿ ಸರಿಪಡಿಸುವುದು ಹಾಗೂ ಅಕ್ರಮಗಳಿಗೆ ಅವಕಾಶವಾಗದಂತೆ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಸಮಿತಿ ಪರಿಶೀಲನೆ ನಡೆಸಲಿದೆ.
ಇದರ ಜತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ನಿಯಂತ್ರಣ, ಕೋಚಿಂಗ್ ಕೇಂದ್ರಗಳ ಮೇಲ್ವಿಚಾರಣೆ ಮತ್ತು ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ಮಾಡುತ್ತಿರುವ ವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಮಾರ್ಗಗಳ ಬಗ್ಗೆಯೂ ಸಮಿತಿ ಗಮನಹರಿಸಲಿದೆ. ಇದನ್ನೂ ಓದಿ: ಬೌದ್ಧ ಅಭಿವೃದ್ಧಿ ನಿಗಮವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ತರಲು ಸಿಎಂಗೆ ಮನವಿ
ಸರ್ಕಾರಿ ಶಾಲೆಗಳು, ಪಿಯು ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು, ಶಿಕ್ಷಕರ ಕೊರತೆ ನಿವಾರಣೆ ಹಾಗೂ ಪ್ರಯೋಗಾಲಯ, ಗ್ರಂಥಾಲಯ ಮತ್ತು ಹಾಸ್ಟೆಲ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತಂತೆಯೂ ಸಮಿತಿ ಅಧ್ಯಯನ ನಡೆಸಲಿದೆ.
ಶಿಕ್ಷಣ ಕ್ಷೇತ್ರದಲ್ಲಿನ ಪ್ರಮುಖ ಸಮಸ್ಯೆಗಳು ಮತ್ತು ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ, ಅವುಗಳಿಗೆ ಸೂಕ್ತ ಪರಿಹಾರ ಹಾಗೂ ಸುಧಾರಣಾ ಕ್ರಮಗಳ ಕುರಿತು ಸಂಪುಟ ಉಪಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಲಿದೆ.
