ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿ ಹಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಬೃಹತ್ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿ ವೈವಿಜಯೇಂದ್ರ ಹೇಳಿದರು.
ಈ ಕುರಿತು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೇ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಪಾದಯಾತ್ರೆಯ ಮೂಲಕ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಮನವಿ ಸಲ್ಲಿಸಲಾಗುವುದು. ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಹೇಳಿದರು.
ವಂದೇ ಮಾತರಂ ಕೇವಲ ಒಂದು ಗೀತೆಯಲ್ಲ. ಕೋಟ್ಯಂತರ ಭಾರತೀಯರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಸಿದ ಹಾಗೂ ದೇಶಭಕ್ತಿಯ ಭಾವನೆ ಮೂಡಿಸಿದ ಗೀತೆಯಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಆರು ಚರಣಗಳನ್ನು ಹಾಡುವಂತೆ ತೀರ್ಮಾನಿಸಿರುವ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಕೇವಲ ಎರಡು ಚರಣಗಳನ್ನು ಹಾಡಿದರೆ ಸಾಕು ಎಂದು ನಿರ್ಧರಿಸಿರುವುದು ದುರದೃಷ್ಟಕರ ಎಂದು ವಿಜಯೇಂದ್ರ ಆಕ್ಷೇಪಿಸಿದರು.
ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ ಅವರು, ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಹಾಡುತ್ತಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಾಠ ಕಲಿಯಬೇಕು ಎಂದು ಸಲಹೆ ನೀಡಿದರು.
ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟವೇ?
ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ನಡೆದಿರುವ ಇ.ಡಿ. ದಾಳಿ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಸತೀಶ್ ಜಾರಕಿಹೊಳಿ ಅವರ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿರುವ ಕಾಂಗ್ರೆಸ್‌ನವರೇ ಇ.ಡಿಗೆ ಮಾಹಿತಿ ನೀಡಿ ಅವರನ್ನು ಸಿಲುಕಿಸಿರಬಹುದೆಂಬ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
ಇ.ಡಿಗೆ ದೂರು ನೀಡಿದವರು ಯಾರು ಎಂಬುದನ್ನು ಪತ್ತೆಹಚ್ಚಬೇಕಿದೆ ಎಂದು ಸತೀಶ್ ಜಾರಕಿಹೊಳಿ ಅವರೇ ಹೇಳಿರುವುದನ್ನು ಉಲ್ಲೇಖಿಸಿದ ವಿಜಯೇಂದ್ರ, ಕಾಂಗ್ರೆಸ್‌ನೊಳಗೆ ಆಂತರಿಕವಾಗಿ ಕತ್ತಿ ಮಸೆಯುವ ಕೆಲಸ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದರು.
ಇ.ಡಿ. ದಾಳಿಯ ಹಿಂದೆ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ಹಾಗೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿಯಿಂದಾಗಿ ಯಾವುದಾದರೂ ಪಿತೂರಿ ಅಥವಾ ಷಡ್ಯಂತ್ರ ನಡೆದಿದೆಯೇ ಎಂಬ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮುಳ್ಳಾಗಬಹುದೆಂಬ ಕಾರಣಕ್ಕೆ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಮಾಹಿತಿ ನೀಡಲಾಗಿದೆಯೇ ಎಂಬ ಪ್ರಶ್ನೆಯೂ ಮೂಡಿದೆ ಎಂದು ವಿಜಯೇಂದ್ರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ಎಸ್. ನಂದೀಶ್ ರೆಡ್ಡಿ ಹಾಗೂ ಪ್ರೀತಂ ಗೌಡ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು ಮತ್ತು ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು.
