ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರ ವಿವಿಧ ಕ್ಷೇತ್ರಗಳಿಗೆ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ರೈತರ ಸಂಕಷ್ಟಕ್ಕೆ ಪರಿಹಾರ ನೀಡಲು ಹಣವಿಲ್ಲದ ಪರಿಸ್ಥಿತಿಯಲ್ಲೂ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ‘ದಿವಾಳಿ ಸರ್ಕಾರದ ಶವಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ತೆರಿಗೆ ಹಣವನ್ನು ಸಮರ್ಪಕವಾಗಿ ನಿರ್ವಹಿಸದೆ, ರೈತರು, ಗುತ್ತಿಗೆದಾರರು, ಸಾರಿಗೆ ಸಂಸ್ಥೆಗಳು, ಆರೋಗ್ಯ ಸಿಬ್ಬಂದಿ, ಅತಿಥಿ ಶಿಕ್ಷಕರು ಸೇರಿದಂತೆ ವಿವಿಧ ವರ್ಗಗಳಿಗೆ ಹಣ ಬಾಕಿ ಉಳಿಸಿರುವ ಸರ್ಕಾರದ ವಿರುದ್ಧ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಬ್ಯಾಂಕ್‌ರಪ್ಸಿ’ ಹಾದಿಯಲ್ಲಿ ರಾಜ್ಯ: ಹಣಕಾಸು ಇಲಾಖೆಯ ಪತ್ರವೇ ಸಾಕ್ಷಿ
“ಸೆಪ್ಟೆಂಬರ್ 17ರಂದು ಹಣಕಾಸು ಇಲಾಖೆಯೇ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರ ರಾಜ್ಯದ ಆರ್ಥಿಕ ಪರಿಸ್ಥಿತಿಯ ಗಂಭೀರತೆಯನ್ನು ಬಯಲಿಗೆಳೆದಿದೆ. ಹೊಸ ಯೋಜನೆಗಳಿಗೆ ಹಣಕಾಸು ಒದಗಿಸುವುದು ಕಷ್ಟವಾಗಿದ್ದು, ರಾಜ್ಯದ ಸಾಲ ಮಾಡುವ ಸಾಮರ್ಥ್ಯವನ್ನು ಈಗಾಗಲೇ ಬಹುತೇಕ ಬಳಸಿಕೊಳ್ಳಲಾಗಿದೆ ಎಂಬ ಎಚ್ಚರಿಕೆಯನ್ನು ಹಣಕಾಸು ಇಲಾಖೆ ನೀಡಿದೆ” ಎಂದು ವಿಜಯೇಂದ್ರ ಹೇಳಿದರು.
ಈಗಾಗಲೇ ಅನುಮೋದನೆಗೊಂಡಿರುವ ಕಾಮಗಾರಿಗಳ ಬಾಕಿ ವೆಚ್ಚ ₹2 ಲಕ್ಷ ಕೋಟಿಗೂ ಅಧಿಕವಾಗಿರುವ ಸಂದರ್ಭದಲ್ಲಿ ಹೊಸ ಯೋಜನೆಗಳಿಗೆ ಹಣ ಒದಗಿಸಿದರೆ, ಇತರ ಇಲಾಖೆಗಳ ಹಂಚಿಕೆಯಲ್ಲಿ ಕಡಿತ ಮಾಡಬೇಕಾಗುತ್ತದೆ ಅಥವಾ ಕಾಮಗಾರಿಗಳು ವಿಳಂಬಗೊಳ್ಳುವ ಸಾಧ್ಯತೆ ಇದೆ ಎಂದು ಹಣಕಾಸು ಇಲಾಖೆ ಎಚ್ಚರಿಸಿದೆ ಎಂದು ಅವರು ಹೇಳಿದರು.
“ಇದು ಸಾಮಾನ್ಯ ಪತ್ರವಲ್ಲ. ರಾಜ್ಯದ ಹಣಕಾಸಿನ ಸ್ಥಿತಿಯ ಕುರಿತು ಸರ್ಕಾರದ ಸ್ವಂತ ಇಲಾಖೆಯೇ ನೀಡಿರುವ ಗಂಭೀರ ಎಚ್ಚರಿಕೆ. ಈ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿಯ ಕುರಿತು ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಬೇಕು” ಎಂದು ವಿಜಯೇಂದ್ರ ಆಗ್ರಹಿಸಿದರು.
ರೈತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
“ನಾವು ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ‘ಬಳ್ಳಾರಿ ಚಲೋ’ ಪಾದಯಾತ್ರೆ ನಡೆಸಿದ್ದು ರೈತರ ಸಮಸ್ಯೆಗಳನ್ನು ಸರ್ಕಾರದ ಮುಂದೆ ಇಡುವುದಕ್ಕಾಗಿ. ಸದನದಲ್ಲಿ ರೈತರ ಸಂಕಷ್ಟದ ಕುರಿತು ಚರ್ಚೆ ಮಾತ್ರವಲ್ಲ, ಪರಿಹಾರವೂ ಸಿಗಬೇಕು ಎಂಬುದು ನಮ್ಮ ಒತ್ತಾಯ” ಎಂದರು.
ರೈತರ ಕೃಷಿ ಸಾಲವನ್ನು ₹5 ಲಕ್ಷದವರೆಗೆ ಮನ್ನಾ ಮಾಡಬೇಕು. ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡಬೇಕು. ಪ್ರತಿದಿನ 7–8 ಗಂಟೆ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಸಬೇಕು ಎಂದು ಅವರು ಆಗ್ರಹಿಸಿದರು.
ವಿದ್ಯುತ್ ಸಮಸ್ಯೆಯಿಂದ ರೈತರು ಇಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಅಗತ್ಯವಿದ್ದರೆ ಹೊರಗಿನಿಂದ ವಿದ್ಯುತ್ ಖರೀದಿಸಿಯಾದರೂ ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕು ಎಂದು ಅವರು ಹೇಳಿದರು.
