ಬೆಂಗಳೂರು: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ತಾವು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಮುಂದೆ ತಾವು ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ತಪ್ಪಾಗಿ ಅರ್ಥೈಸಲಾಗಿದೆ. SIR ಪ್ರಕ್ರಿಯೆಯನ್ನು ಸಮರ್ಥಿಸುವ ಉದ್ದೇಶದಿಂದ ತಾವು ಮಾತನಾಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಫಾರಂ-7 ಬಳಸಿ ಕಾಂಗ್ರೆಸ್ ಬೆಂಬಲಿತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಬಿಜೆಪಿ ಪ್ರಯತ್ನಿಸಿತ್ತು. ಆದರೆ, ಕಾಂಗ್ರೆಸ್ ನಾಯಕರ ಹೋರಾಟ ಹಾಗೂ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂಬುದಷ್ಟೇ ತಮ್ಮ ಹೇಳಿಕೆಯ ಉದ್ದೇಶವಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ಈ ಹೋರಾಟಕ್ಕೆ ಬೆಳಗಾವಿ ಜಿಲ್ಲೆಯಿಂದಲೇ ಚಾಲನೆ ನೀಡಲಾಗಿತ್ತು. ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುವ ಪ್ರಯತ್ನವನ್ನು ಸಂಘಟಿತವಾಗಿ ಎದುರಿಸಿ ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ, SIR ಪ್ರಕ್ರಿಯೆ ಸರಿಯಾಗಿದೆ ಎಂದು ತಾವು ಎಲ್ಲಿಯೂ ಹೇಳಿಲ್ಲ. ತಮ್ಮ ಹೇಳಿಕೆಯನ್ನು ಆ ರೀತಿಯಲ್ಲಿ ಬಿಂಬಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅರ್ಹ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ತಾವು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ. ಮತದಾರರ ಪಟ್ಟಿಯಿಂದ ಕಾನೂನುಬದ್ಧವಾಗಿ ಅರ್ಹತೆ ಹೊಂದಿರುವವರ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕಿನ ರಕ್ಷಣೆ ತಮ್ಮ ಆದ್ಯತೆಯಾಗಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ತಮ್ಮ ಬೆಂಬಲ ಸದಾ ಇರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ
