ಬೆಂಗಳೂರು: ದೀಪಾವಳಿ ಹಬ್ಬ ಹಾಗೂ ವಾರಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) 2,600 ಹೆಚ್ಚುವರಿ ವಿಶೇಷ ಬಸ್ಗಳನ್ನು ಓಡಿಸಲು ನಿರ್ಧರಿಸಿದೆ.
ನವೆಂಬರ್ 6ರಿಂದ 8ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಪ್ರಮುಖ ನಗರಗಳಿಗೆ ವಿಶೇಷ ಬಸ್ಗಳು ಸಂಚರಿಸಲಿವೆ. ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸಾಗುವ ಪ್ರಯಾಣಿಕರ ಅನುಕೂಲಕ್ಕಾಗಿ ನವೆಂಬರ್ 10 ಮತ್ತು 11ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ಗಳನ್ನು ನಿಯೋಜಿಸಲಾಗಿದೆ.
ಯಾವ ನಿಲ್ದಾಣದಿಂದ ಯಾವ ಊರಿಗೆ ಬಸ್?
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್)ದಿಂದ ಮಂಗಳೂರು, ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ, ಬಳ್ಳಾರಿ, ರಾಯಚೂರು ಸೇರಿದಂತೆ ತಿರುಪತಿ ಮತ್ತು ಹೈದರಾಬಾದ್ಗೆ ಬಸ್ಗಳು ಸಂಚರಿಸಲಿವೆ.
ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಕುಶಾಲನಗರ ಹಾಗೂ ಮಡಿಕೇರಿಗೆ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಶಾಂತಿನಗರ ಟಿಟಿಎಂಸಿ ನಿಲ್ದಾಣದಿಂದ ಚೆನ್ನೈ, ಕೊಯಮತ್ತೂರು, ಮಧುರೈ, ತಿರುಚಿ, ಪಾಲಕ್ಕಾಡ್, ತ್ರಿಶೂರ್ ಹಾಗೂ ಎರ್ನಾಕುಲಂ ಸೇರಿದಂತೆ ತಮಿಳುನಾಡು ಮತ್ತು ಕೇರಳದ ನಗರಗಳಿಗೆ ಪ್ರೀಮಿಯಂ ಬಸ್ಗಳು ಕಾರ್ಯಾಚರಣೆ ನಡೆಸಲಿವೆ.
ಇದಲ್ಲದೆ, ವಿಜಯನಗರ, ಯಶವಂತಪುರ, ಜಯನಗರ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಸೇರಿದಂತೆ ಹಲವು ನಿಲ್ದಾಣಗಳಿಂದಲೂ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಟಿಕೆಟ್ ಬುಕಿಂಗ್ಗೆ ರಿಯಾಯಿತಿ
ಪ್ರಯಾಣಿಕರು ಕೆಎಸ್ಆರ್ಟಿಸಿಯ ಅಧಿಕೃತ ವೆಬ್ಸೈಟ್ www.ksrtc.karnataka.gov.in ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ಶೇ.5ರಷ್ಟು ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಹಿಂದಿರುಗುವ ಟಿಕೆಟ್ಗಳನ್ನು ಒಟ್ಟಿಗೆ ಕಾಯ್ದಿರಿಸಿದರೆ ವಾಪಸ್ ಪ್ರಯಾಣದ ದರದಲ್ಲಿ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ.
ಬಸ್ನ ನಿಖರ ಸಮಯ, ನಿಲ್ದಾಣ ಹಾಗೂ ಪಿಕ್ಅಪ್ ಪಾಯಿಂಟ್ಗಳ ವಿವರಗಳನ್ನು ಟಿಕೆಟ್ನಲ್ಲಿ ಪರಿಶೀಲಿಸಿಕೊಂಡು ಪ್ರಯಾಣಿಸುವಂತೆ ಕೆಎಸ್ಆರ್ಟಿಸಿ ಪ್ರಯಾಣಿಕರಿಗೆ ಮನವಿ ಮಾಡಿದೆ.
