ಬೆಂಗಳೂರು: ತಮ್ಮ ವಿರುದ್ಧ ಹಾಗೂ ಸಂಪುಟ ಸಹೋದ್ಯೋಗಿಗಳ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಜಾರಿ ನಿರ್ದೇಶನಾಲಯವನ್ನು (ಇಡಿ) ಅಸ್ತ್ರವಾಗಿ ಬಳಸಿಕೊಳ್ಳಲು ಕೇಂದ್ರ ಸಚಿವರೊಬ್ಬರು ಒತ್ತಡ ಹೇರುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಈ ಮೂಲಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ನವದೆಹಲಿಯ ಅಧಿಕಾರಿಗಳ ವಲಯದಲ್ಲಿ ಈ ಬಗ್ಗೆ ಗುಸುಗುಸು ಕೇಳಿಬರುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಮೋದಿ ಸರ್ಕಾರದ ಐಟಿ ಮತ್ತು ಇಡಿ ಸಂಸ್ಥೆಗಳನ್ನು ತಮ್ಮ ಸಂಪುಟ ಸಹೋದ್ಯೋಗಿಗಳು ಹಾಗೂ ತಮ್ಮ ವಿರುದ್ಧ ಬಳಸಿಕೊಳ್ಳಲು ಕೇಂದ್ರ ಸಚಿವರೊಬ್ಬರು ತೀವ್ರವಾಗಿ ಒತ್ತಡ ಹೇರುತ್ತಿದ್ದಾರೆ ಎಂದು ದೂರಿದ್ದಾರೆ.
ಕೆಪಿಎಸ್ಸಿ ನೇಮಕಾತಿ ಪ್ರಕರಣವನ್ನು ರಾಜಕೀಯ ಮರೆಮಾಚುವ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದೂ ಆರೋಪಿಸಿದ್ದಾರೆ. ಆರ್ಎಸ್ಎಸ್ನ ಹೊಸ ಗ್ರೂಪ್ ಡಿ ನೇಮಕಾತಿ ವಿಚಾರವನ್ನು ಮುಂದಿಟ್ಟುಕೊಂಡು ಕೆಪಿಎಸ್ಸಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ತಮ್ಮನ್ನು ತಪ್ಪಾಗಿ ಸಿಲುಕಿಸಲು ಆರೋಪಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ. ಇದಕ್ಕಾಗಿ ಇಡಿಯನ್ನು ಬಳಸಿಕೊಳ್ಳಲು ಯತ್ನಿಸಲಾಗುತ್ತಿದೆ ಎಂಬ ವರದಿಗಳಿವೆ ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
ಇದಲ್ಲದೆ, ಗೌರವಾನ್ವಿತ ಸಚಿವರು ಏಕಾಂಗಿಯಾಗಿ ಕ್ರಮ ಕೈಗೊಳ್ಳಲು ಸಿದ್ಧರಿಲ್ಲದ ಕಾರಣ ತಮ್ಮದೇ ಸಮ್ಮಿಶ್ರ ಪಾಲುದಾರರನ್ನು ಈ ವಿಚಾರದಲ್ಲಿ ಎಳೆದು ತರಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಅವರು ಯಾರನ್ನು ಉದ್ದೇಶಿಸಿ ಈ ಆರೋಪ ಮಾಡಿದ್ದಾರೆ ಎಂಬ ಕುತೂಹಲ ಮೂಡಿದೆ. ಆದರೆ, ತಮ್ಮ ಪೋಸ್ಟ್ನಲ್ಲಿ ಕೇಂದ್ರ ಸಚಿವರ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ.
