ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿ ಪ್ರವಾಸದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಈ ವಿಚಾರ ಪ್ರಸ್ತಾಪಿಸಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ರಾಜಕೀಯ ತಂತ್ರ ರೂಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ದೆಹಲಿ ಪ್ರವಾಸ ಮುಗಿಸಿ ರಾಜ್ಯಕ್ಕೆ ಮರಳಿರುವ ಸಿದ್ದರಾಮಯ್ಯ ಬಣ ಇದೀಗ ತನ್ನ ಬೆಂಬಲಿಗರು ಹಾಗೂ ಅಹಿಂದ (ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳು ಮತ್ತು ದಲಿತರು) ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ವೇಗ ನೀಡಿದೆ.
ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಸೋಲಿಗೆ ಸ್ಟಿಂಗ್ ಆಪರೇಷನ್ ಪ್ರಕರಣವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
ಸ್ಟಿಂಗ್ ಆಪರೇಷನ್ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ಸಿದ್ದರಾಮಯ್ಯ ಬೆಂಬಲಿತ ನಾಯಕರು, ಶೀಘ್ರದಲ್ಲೇ ಮೈಸೂರಿನಲ್ಲಿ ಬೃಹತ್ ಅಹಿಂದ ಸಮಾವೇಶ ಆಯೋಜಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಅವರ ರಾಜಕೀಯ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸುವ ಲೆಕ್ಕಾಚಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಕೆ.ಎನ್. ರಾಜಣ್ಣ, ರಾಜ್ಯದ ಅಹಿಂದ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಗಳು ನಡೆಯುತ್ತಿವೆ. ಶೀಘ್ರದಲ್ಲೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಮುನಿಸು ಇಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.
ಒಟ್ಟಿನಲ್ಲಿ, ಸ್ಟಿಂಗ್ ಆಪರೇಷನ್ ವಿವಾದ, ವಿಧಾನ ಪರಿಷತ್ ಚುನಾವಣೆಯ ಸೋಲು ಹಾಗೂ ಅಹಿಂದ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಗಳು ರಾಜ್ಯ ಕಾಂಗ್ರೆಸ್‌ನಲ್ಲಿ ಹೊಸ ರಾಜಕೀಯ ಚರ್ಚೆಗೆ ನಾಂದಿ ಹಾಡಿವೆ. ಮುಂಬರುವ ದಿನಗಳಲ್ಲಿ ಸಿದ್ದರಾಮಯ್ಯ ಬಣದ ನಡೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.
