ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯನ್ನು ಬದಲಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆಗಳು) ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಜನಪ್ರತಿನಿಧಿ ಕಾಯ್ದೆ–1951ರ ಸೆಕ್ಷನ್ 21ರ ಅನ್ವಯ ಕರ್ನಾಟಕ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಭಾರತ ಚುನಾವಣಾ ಆಯೋಗ ಈ ನೇಮಕಾತಿ ನಿರ್ಧಾರ ಕೈಗೊಂಡಿದೆ.
ಹೊಸ ಆದೇಶದ ಪ್ರಕಾರ, ಚಿತ್ರದುರ್ಗ ಉಪವಿಭಾಗದ ಸಹಾಯಕ ಆಯುಕ್ತರನ್ನು ಹಿರಿಯೂರು ವಿಧಾನಸಭಾ ಕ್ಷೇತ್ರದ ನೂತನ ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿ (ರಿಟರ್ನಿಂಗ್ ಆಫೀಸರ್) ಪ್ರಮುಖ ಪಾತ್ರ ವಹಿಸುತ್ತಾರೆ. ಅಭ್ಯರ್ಥಿಗಳ ನಾಮಪತ್ರ ಸ್ವೀಕಾರ ಮತ್ತು ಪರಿಶೀಲನೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚುನಾವಣಾ ಸಿದ್ಧತೆ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತಾರೆ. ಮತದಾನದ ಬಳಿಕ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸುವ ಕಾರ್ಯದಲ್ಲಿಯೂ ಚುನಾವಣಾಧಿಕಾರಿ ಪ್ರಮುಖ ಹೊಣೆಗಾರಿಕೆ ಹೊಂದಿರುತ್ತಾರೆ.
ಭಾರತ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರ ಆದೇಶದ ಮೇರೆಗೆ ರಾಜ್ಯ ಸರ್ಕಾರದ ಡಿಪಿಎಆರ್ (ಚುನಾವಣೆಗಳು) ಉಪ ಕಾರ್ಯದರ್ಶಿ ಮಧು ಎ.ಸಿ. ಅವರು ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದಾರೆ.
ಜನಪ್ರತಿನಿಧಿ ಕಾಯ್ದೆಯಡಿ ಚುನಾವಣಾಧಿಕಾರಿಗಳನ್ನು ನೇಮಿಸುವ ಹಾಗೂ ಬದಲಾವಣೆ ಮಾಡುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ಅದರಂತೆ ರಾಜ್ಯ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಇನ್ಮುಂದೆ ಚಿತ್ರದುರ್ಗ ಉಪವಿಭಾಗದ ಸಹಾಯಕ ಆಯುಕ್ತರು ಹಿರಿಯೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
