ಮಂಗಳೂರು: ಕಳೆದ ಎರಡೂವರೆ ಮೂರು ವರ್ಷಗಳಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ದೇಶದ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಕುಂದಿಸುವ ಉದ್ದೇಶದಿಂದ ದುರುದ್ದೇಶಪೂರಿತ ಅಭಿಯಾನ ನಡೆಸುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.
ಬಾಂಗ್ಲಾದೇಶ ಮತ್ತು ನೇಪಾಳದಲ್ಲಿ ನಡೆದ ಅಶಾಂತಿ ಹಾಗೂ ಆಡಳಿತ ಬದಲಾವಣೆಯಂತಹ ಕ್ರಾಂತಿಯನ್ನು ಭಾರತದಲ್ಲೂ ಸೃಷ್ಟಿಸಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಅವರು ದೂರಿದ್ದಾರೆ.
ಬಿಜೆಪಿ ಇವಿಎಂ ತಿರುಚುವ ಮೂಲಕವೇ ಚುನಾವಣೆ ಗೆಲ್ಲುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಅವರು, 2014, 2019 ಮತ್ತು 2024ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆಲುವು ಸಾಧಿಸಿದಾಗ ಇವಿಎಂ ದೋಷರಹಿತವಾಗಿತ್ತೇ ಎಂದು ಪ್ರಶ್ನಿಸಿದರು.
ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗುವ ಮೊದಲೇ 2014ರಿಂದ ಈವರೆಗೆ ಕಾಂಗ್ರೆಸ್ ಸುಮಾರು 95 ಚುನಾವಣೆಗಳಲ್ಲಿ ಸೋತಿದೆ. ಈ ಸೋಲುಗಳಿಗೆ ಯಾರನ್ನು ಹೊಣೆ ಮಾಡುತ್ತೀರಿ ಎಂದು ಪ್ರಶ್ನಿಸಿದ ತೇಜಸ್ವಿ ಸೂರ್ಯ, ಇವಿಎಂ ಹ್ಯಾಕ್ ಮಾಡಲು ಸಾಧ್ಯವಿದ್ದರೆ ಅದೇ ಯಂತ್ರಗಳನ್ನು ಬಳಸಿ ಕರ್ನಾಟಕ, ತೆಲಂಗಾಣ ಮತ್ತು ಕೇರಳದಲ್ಲಿ ಕಾಂಗ್ರೆಸ್ ಹೇಗೆ ಅಧಿಕಾರಕ್ಕೆ ಬಂದಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಮಾತನಾಡಿದ ಅವರು, ದೇಶದಲ್ಲಿ ಈವರೆಗೆ 12 ಬಾರಿ ಎಸ್‌ಐಆರ್ ನಡೆದಿದ್ದು, ಅದರಲ್ಲಿ 11 ಬಾರಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲೇ ನಡೆದಿದೆ ಎಂದು ತಿಳಿಸಿದರು.
ಹಿಂದಿನಿಂದಲೂ ಜಾರಿಯಲ್ಲಿರುವ ನಿಯಮಗಳನ್ನೇ ಈಗಲೂ ಅನುಸರಿಸಲಾಗುತ್ತಿದೆ. ಹಾಗಿದ್ದರೂ ಕಾಂಗ್ರೆಸ್ ಈಗ ವಿರೋಧ ವ್ಯಕ್ತಪಡಿಸುತ್ತಿರುವುದೇಕೆ ಎಂದು ತೇಜಸ್ವಿ ಸೂರ್ಯ ಪ್ರಶ್ನಿಸಿದರು.
ಸಮಾವೇಶಕ್ಕೂ ಮುನ್ನ ಮಂಗಳೂರಿನ ಕ್ಲಾಕ್ ಟವರ್‌ನಿಂದ ಕದ್ರಿ ಮೈದಾನದವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಬಳಿಕ ನಡೆದ ಸಮಾವೇಶದಲ್ಲಿ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
