ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶಭರಿತ ಮೋಡಗಳ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್ 7ರಿಂದ 9ರವರೆಗೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಈಗಾಗಲೇ ಶುಕ್ರವಾರ ಬೆಂಗಳೂರು ನಗರ, ಹಾಸನ, ದಕ್ಷಿಣ ಕನ್ನಡ, ಉಡುಪಿ, ತುಮಕೂರು ಮತ್ತು ಕೊಡಗು ಸೇರಿದಂತೆ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮತ್ತೊಂದೆಡೆ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
