ಬೆಂಗಳೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಾಗೂ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿ ಸಂರಕ್ಷಣಾ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಜಾಲತಾಣಗಳ ರೀಲ್ಸ್ಗಾಗಿ ಹುಲಿ ಮತ್ತು ಕಾಡಾನೆಗಳನ್ನು ಬೆನ್ನಟ್ಟಿದ ಆರೋಪ ತಮಿಳುನಾಡು ಸಚಿವ ವನ್ನಿ ಅರಸು ಹಾಗೂ ಅವರ ಬೆಂಬಲಿಗರ ವಿರುದ್ಧ ಕೇಳಿಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ, ಅರಣ್ಯ ನಿಯಮಗಳನ್ನು ಉಲ್ಲಂಘಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಈ ಕುರಿತು ಗುರುವಾರ ಪ್ರತಿಕ್ರಿಯಿಸಿದ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ, ಅರಣ್ಯ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವೈರಲ್ ವಿಡಿಯೋದಲ್ಲಿ ಏನಿದೆ?
ಅಕ್ಟೋಬರ್ 10ರಂದು ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ವಿಡಿಯೋದಲ್ಲಿ ತಮಿಳುನಾಡಿನ ಸಾಮಾಜಿಕ ನ್ಯಾಯ ಇಲಾಖೆ ಸಚಿವ ವನ್ನಿ ಅರಸು ಮತ್ತು ಅವರ ತಂಡವು ಅರಣ್ಯ ಪ್ರದೇಶದಲ್ಲಿ ಸಫಾರಿ ವಾಹನದಿಂದ ಕೆಳಗಿಳಿದು ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ರೀಲ್ಸ್ ಚಿತ್ರೀಕರಣದ ಸಂದರ್ಭದಲ್ಲಿ ತಂಡದ ಸದಸ್ಯರು ಕಾಡಾನೆಗಳ ಸಮೀಪಕ್ಕೆ ತೆರಳಿರುವುದು ಹಾಗೂ ವಾಹನದ ಮೂಲಕ ಓಡುತ್ತಿದ್ದ ಹುಲಿಯನ್ನು ಹಿಂಬಾಲಿಸಿರುವ ದೃಶ್ಯಗಳು ವಿಡಿಯೋದಲ್ಲಿವೆ ಎನ್ನಲಾಗಿದೆ. ಇಂತಹ ವರ್ತನೆಯಿಂದ ವನ್ಯಜೀವಿಗಳ ಸಹಜ ಚಲನವಲನಕ್ಕೆ ಅಡ್ಡಿಯಾಗುವುದರ ಜೊತೆಗೆ ಅವುಗಳ ಸುರಕ್ಷತೆಗೂ ಅಪಾಯ ಎದುರಾಗುವ ಸಾಧ್ಯತೆಯಿದೆ.
ಪ್ರಭಾವಿಗಳಾದರೂ ಕ್ರಮ ಖಚಿತ
ವನ್ಯಜೀವಿಗಳ ಸಂರಕ್ಷಣೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಗಳ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸುವ ಉದ್ದೇಶದಿಂದ ವನ್ಯಜೀವಿಗಳಿಗೆ ತೊಂದರೆ ನೀಡುವ ಕೃತ್ಯಗಳಿಗೆ ಅವಕಾಶವಿಲ್ಲ ಎಂಬ ಸಂದೇಶವನ್ನು ಸರ್ಕಾರದ ಎಚ್ಚರಿಕೆ ಸಾರಿದೆ.
