ಬೆಂಗಳೂರು: MBA ಪರೀಕ್ಷೆಗಳ ಫಲಿತಾಂಶ ಪ್ರಕಟಿಸಲು ಸಾಮಾನ್ಯವಾಗಿ ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯವು ಪರೀಕ್ಷೆ ಮುಕ್ತಾಯಗೊಂಡ ಕೇವಲ ನಾಲ್ಕು ದಿನಗಳಲ್ಲೇ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ.
ವಿಶ್ವವಿದ್ಯಾಲಯದ MBA ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 3,950 ವಿದ್ಯಾರ್ಥಿಗಳ ಒಟ್ಟು 27,546 ಉತ್ತರ ಪತ್ರಿಕೆಗಳನ್ನು ಕೇವಲ ನಾಲ್ಕು ದಿನಗಳಲ್ಲಿ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟಿಸಲಾಗಿದೆ.
ಈ ತ್ವರಿತ ಫಲಿತಾಂಶದಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳಿಗೆ ಅರ್ಜಿ ಸಲ್ಲಿಸಲು ಹಾಗೂ ದೇಶ-ವಿದೇಶಗಳ ಪ್ರತಿಷ್ಠಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರವೇಶ ಪಡೆಯಲು ಅನುಕೂಲವಾಗಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಮೇಶ್ ಬಿ. ತಿಳಿಸಿದ್ದಾರೆ.
ಈ ಸಾಧನೆಗೆ ಸಹಕರಿಸಿದ MBA ಅಧ್ಯಾಪಕರು, ಮೌಲ್ಯಮಾಪನ ಘಟಕದ ಸಂಯೋಜಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಕುಡೇನಟ್ಟಿ ಅವರು ಅಭಿನಂದನೆ ಹಾಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
