ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸಿಐಡಿ ಕ್ಲೀನ್ ಚಿಟ್ ನೀಡಿದ್ದರೂ, ಅವರ ವಿರುದ್ಧದ ತನಿಖಾ ಪ್ರಕ್ರಿಯೆ ಸಂಪೂರ್ಣವಾಗಿ ಮುಕ್ತಾಯಗೊಂಡಿಲ್ಲ. ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ಪ್ರತ್ಯೇಕವಾಗಿ ತನಿಖೆ ಮುಂದುವರಿಸಿರುವುದರಿಂದ ನಾಗೇಂದ್ರ ಅವರ ರಾಜಕೀಯ ಭವಿಷ್ಯದ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿವೆ.
ಸಿಐಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಬಿ. ನಾಗೇಂದ್ರ ಮತ್ತು ನಿಗಮದ ಮಾಜಿ ಅಧ್ಯಕ್ಷ ಬಸವರಾಜ ದದ್ದಲ್ ಅವರನ್ನು ಪ್ರಮುಖ ಸಾಕ್ಷಿಗಳೆಂದು ಪರಿಗಣಿಸಲಾಗಿದೆ. ನಿಗಮದ ಹಣವನ್ನು ನಾಗೇಂದ್ರ ಅವರು ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಸಿಐಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದೆ ಎನ್ನಲಾಗಿದೆ.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಅವರನ್ನು ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕನೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ನೆಕ್ಕುಂಟಿ ನಾಗರಾಜ್, ಹಣವನ್ನು ದುಪ್ಪಟ್ಟು ಮಾಡಿಕೊಡುವುದಾಗಿ ಹೇಳಿ ಹಣ ಪಡೆದಿದ್ದರು. ಈ ವ್ಯವಹಾರದ ಬಗ್ಗೆ ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರಿಗೆ ಮಾಹಿತಿ ಇರಲಿಲ್ಲ ಎಂಬ ಅಂಶವನ್ನೂ ಸಿಐಡಿ ತನ್ನ ತನಿಖಾ ವರದಿಯಲ್ಲಿ ದಾಖಲಿಸಿದೆ.
94 ಕೋಟಿ ರೂ. ಅಕ್ರಮ ವರ್ಗಾವಣೆಯಿಂದ ಬೆಳಕಿಗೆ ಬಂದ ಹಗರಣ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಆತ್ಮಹತ್ಯೆಯ ಬಳಿಕ ಪತ್ತೆಯಾದ ಡೆತ್‌ನೋಟ್‌ನಲ್ಲಿ ನಿಗಮದ ಹಣಕಾಸು ಅಕ್ರಮಗಳ ಕುರಿತು ಉಲ್ಲೇಖವಾಗಿತ್ತು. ಇದರ ಬೆನ್ನಲ್ಲೇ ನಿಗಮದ ಬ್ಯಾಂಕ್ ಖಾತೆಯಿಂದ ಸುಮಾರು 94 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.
ಬ್ಯಾಂಕ್‌ನಿಂದ ಯಾವುದೇ ಮಾಹಿತಿ ಅಥವಾ ಸಂದೇಶವಿಲ್ಲದೆ ಹಣ ವರ್ಗಾವಣೆಯಾಗಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ಸಿಬ್ಬಂದಿ ವಂಚನೆ ನಡೆಸಿದ್ದಾರೆ ಎಂದು ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್‌ನ ಆರು ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಹಣ ದುರ್ಬಳಕೆ ಹಾಗೂ ಚುನಾವಣಾ ಉದ್ದೇಶಕ್ಕೆ ಬಳಕೆಯಾದ ಆರೋಪಗಳು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದವು. ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ರಾಜಕೀಯ ಒತ್ತಡದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಇದೀಗ ಸಿಐಡಿ ವರದಿಯಲ್ಲಿ ನಾಗೇಂದ್ರ ಅವರಿಗೆ ಅನುಕೂಲಕರ ಅಂಶಗಳು ಉಲ್ಲೇಖವಾಗಿದ್ದರೂ, ಸಿಬಿಐ ಮತ್ತು ಇ.ಡಿ. ತನಿಖೆಗಳು ಮುಂದುವರಿದಿವೆ. ಸಿಬಿಐ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ನೋಟಿಸ್ ನೀಡುತ್ತಿರುವುದು ಪ್ರಕರಣದ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ದೊರೆಯುವ ವಿಚಾರವೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
