ಹಾಸನದಲ್ಲಿ ವಾರಾಂತ್ಯದ ಕರ್ಫ್ಯೂ

ಹಾಸನದಲ್ಲಿ ವಾರಾಂತ್ಯದ ಕರ್ಫ್ಯೂ

ಹಾಸನ: ಸೋಂಕು ಹರಡುವಿಕೆ ತಡೆಯಲು ಹಾಸನ ಜಿಲ್ಲಾಡಳಿತ ಎರಡು ವಾರಗಳ ಕಾಲ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ವಾರಾಂತ್ಯದ ಕರ್ಫ್ಯೂ ಜಾರಿಗೆ ಬರಲಿದೆ.

ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಈ ಕುರಿತು ಗುರುವಾರ ಆದೇಶವನ್ನು ಹೊರಡಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸುವುದು ಮತ್ತು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯ ಎಂದು ತಿಳಿಸಿದ್ದಾರೆ.

ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಹಾಸನ ಜಿಲ್ಲೆಯಲ್ಲಿ 81 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 1063 ಆಗಿದೆ. ಇದುವರೆಗೂ ಜಿಲ್ಲೆಯಲ್ಲಿ 1227 ಜನರು ಮೃತಪಟ್ಟಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 109716 ಆಗಿದೆ.

ಶೇ 100ರಷ್ಟು ಲಸಿಕೆ ನೀಡುವಂತೆ ಸೂಚನೆ
ಹೆಚ್ಚಿನ ಕೋವಿಡ್ ಸೋಂಕು ಪ್ರಕರಣಗಳು ಕಂಡು ಬರುವ ಪ್ರದೇಶಗಳಲ್ಲಿ ಶೇ. 100 ರಷ್ಟು ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಆರ್ ಗಿರೀಶ್ ಸೂಚನೆ ನೀಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಬಳಸಿಕೊಂಡು ತಾಲ್ಲೂಕುವಾರು ನಿಗದಿಪಡಿಸಿರುವ ಲಸಿಕೆ ಗುರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related