ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದು ಪಡಿಸಿ – ಸಿದ್ದು ವ್ಯಂಗ್ಯ

ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದು ಪಡಿಸಿ – ಸಿದ್ದು ವ್ಯಂಗ್ಯ

ಬೆಂಗಳೂರು, ಜೂ 17 : ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ, ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ..? ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ..? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

ಇನ್ನು ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ. ಹೊಸ ಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದಿದ್ದಾರೆ.

Related