10 ವರ್ಷದಿಂದ ಬಿಜೆಪಿ ಕೊಡುಗೆ ಶೂನ್ಯ: ಲಕ್ಷ್ಮೀ ಹೆಬ್ಬಾಳ್ಕರ್

10 ವರ್ಷದಿಂದ ಬಿಜೆಪಿ ಕೊಡುಗೆ ಶೂನ್ಯ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಹೆಚ್ಚಿನ ಮಹತ್ವ ನೀಡುತ್ತದೆ. ಆದ್ದರಿಂದ ನಾನು ಕಳೆದ 25 ವರ್ಷದ ಹಿಂದೆ ಒಬ್ಬ ಸಾಮಾನ್ಯ ಕಾರ್ಯಕರ್ತೆಯಾಗಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ರಾಜಕೀಯ ಜೀವನವನ್ನು ಆರಂಭಿಸಿದೆ ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ಇಡೀ ಕರ್ನಾಟಕದಲ್ಲಿ ಏಕೈಕ ಮಹಿಳಾ ಮಂತ್ರಿಯಾಗಿ ನಿಮ್ಮ ಮುಂದೆ ನಿಂತಿದ್ದೇನೆ.

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜನಸಾಮಾನ್ಯರಿಗೂ ಯಾವ ರೀತಿ ಸ್ಥಾನ ನೀಡುತ್ತದೆ ಎಂದು ನಿಮಗೀಗಾಗಲೇ ತಿಳಿದಿರಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿದರು.

ಲೋಕಸಭಾ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಮೃಣಾಲ್‌ ಹೆಬ್ಬಾಳ್ಕರ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಈ ಬಾರಿ ಮೈಮರೆಯದೆ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಬಿಜೆಪಿ ಕೊಡುಗೆ ಶೂನ್ಯ

ಕಳೆದ 10 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಮತ್ತು ಇಡೀ ಕರ್ನಾಟಕ ರಾಜ್ಯಕ್ಕೆ ಬಿಜೆಪಿ ಪಕ್ಷದ ಕೊಡುಗೆ ಶೂನ್ಯ. ಆದ್ದರಿಂದ ಈ ಬಾರಿಯಾದರೂ ಕೂಡ ನಮ್ಮ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡವರ ಬದುಕು ಬಂಗಾರವಾಗುತ್ತದೆ ಎಂದು ಹೇಳಿದರು. ಈಗಿನ ಬಿಜೆಪಿ ಅಭ್ಯರ್ಥಿ ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ, ಜಿಲ್ಲೆಯ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರು. ಹಾಗಾಗಿ ಸ್ಥಳೀಯ ಅಭ್ಯರ್ಥಿಗೆ ಮತ ನೀಡಿ ಎಂದರು.

ಸ್ಥಳೀಯ ಸಮಸ್ಯೆಗಳನ್ನು ಸರಿಯಾಗಿ ಅರಿತಿರುವ ಮೃಣಾಲ್‌ ಹೆಬ್ಬಾಳ್ಕರ್, ನಿಮ್ಮ ಧ್ವನಿಯಾಗಿ ದೆಹಲಿಯಲ್ಲಿ ಕೆಲಸ ಮಾಡಲಿದ್ದಾನೆ. ಇನ್ನೂ ಯುವಕನಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಂತೆ ಬೆಳಗಾವಿ ಕ್ಷೇತ್ರಕ್ಕೆ ಮೃಣಾಲ್‌ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಭೇರಿ ಬಾರಿಸುವಂತಾಗಬೇಕು ಎಂದರು‌.

 

Related