ಮತ್ತೆ ಇಂದಿನಿಂದ ಬಜೆಟ್ ಅಧಿವೇಶನ

ಮತ್ತೆ ಇಂದಿನಿಂದ ಬಜೆಟ್ ಅಧಿವೇಶನ

ಬೆಂಗಳೂರು, ಮಾ. 02: ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಫೆಬ್ರವರಿ 17ರಿಂದ ಆರಂಭಗೊಂಡು ನಂತರ 3 ದಿನಗಳ ಕಾಲ ನಡೆದಿದ್ದ ವಿಧಾನ ಮಂಡಲದ ಅಧಿವೇಶನ ಮತ್ತೆ ಇಂದಿನಿಂದ ಪುನರಾರಂಭಗೊಳ್ಳಲಿದೆ. ಮಾರ್ಚ್ 5ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮೊದಲು ಸಿಎಂ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ.

ಆದರೆ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ನೀಡಿದ್ದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿಯುವ ಸಾಧ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ, ಕೇಂದ್ರದ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸುವ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಸಾಲಮನ್ನಾಕ್ಕಾಗಿ ಮೀಸಲಿಟ್ಟಿದ್ದ ₹25 ಸಾವಿರ ಕೋಟಿಯನ್ನು ಸರ್ಕಾರ ಬೇರೆ ಉದ್ದೇಶಕ್ಕೆ ಬಳಸಿದೆ ಎನ್ನುವ ಆರೋಪವನ್ನು ಸದನದಲ್ಲಿ ಪ್ರಸ್ತಾಪಿಸಲು ಜೆಡಿಎಎಸ್ ಮುಂದಾಗಿದೆ. ಈ ಬಗ್ಗೆ ಧ್ವನಿ ಎತ್ತುತ್ತೇನೆ ಅಂತಾ ಹೆಚ್ಡಿಕೆ ಹೇಳಿದ್ದಾರೆ.

ಇನ್ನೊಂದೆಡೆ ಇದೇ ಮಾರ್ಚ್ 3 ಮತ್ತು 4 ರಂದು ಸಂವಿಧಾನದ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ. ಆ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

Related